ಬೆಂಗಳೂರು : ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಕೊನೆಗೂ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ನೇಮಕಾತಿಗಾಗಿ ಶಿಕ್ಷಣ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದು. ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ. ಈಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ದೊರೆತಂತಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಶಿಕ್ಷಣ ಇಲಾಖೆ
ಒಟ್ಟು ಹುದ್ದೆಗಳು: 15 ಸಾವಿರ
ಹುದ್ದೆಗಳ ಹೆಸರು: ಶಿಕ್ಷಕರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 16
ಮೈಸೂರು, ಕಲಬುರಗಿ ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನೇಮಕಾತಿ ನಡೆಯುತ್ತಿದೆ. ಪ್ರಾಥಮಿಕ ಶಾಲೆ ಶಿಕ್ಷಕರು, ಪ್ರೌಢಶಾಲೆ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750 ರೂಪಾಯಿ ಇದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಕನಿಷ್ಠ 21ರಿಂದ ಗರಿಷ್ಠ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 44,425- 99,400 ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ schooleducation.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಬೇಕು. ಇದಾದ ಬಳಿಕ ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.



















