ಬೆಂಗಳೂರು: ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ದೀಪಾವಳಿ ಸಂದರ್ಭದಲ್ಲಿಯೇ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದ್ದು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಇದೇ ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಇದರೊಂದಿಗೆ ಸರ್ಕಾರಿ ಉದ್ಯೋಗಕ್ಕಾಗಿ ಕಾದು ಕುಳಿತವರಿಗೆ ಒಳ್ಳೆಯ ಅವಕಾಶ ಸಿಕ್ಕಂತಾಗಿದೆ. ಸರ್ಕಾರಿ ಶಾಲೆಗಳು ಮಾತ್ರವಲ್ಲದೆ, ರಾಜ್ಯದ ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
“ಇಂಗ್ಲಿಷ್ ಕಲಿಕೆಗೆ ಆದ್ಯತೆ’
6ನೇ ತರಗತಿಯಿಂದ ಕನ್ನಡದ ಜತೆಗೆ ಇಂಗ್ಲಿಷ್ ಕಲಿಕೆಗೂ ಅವಕಾಶವಿರಲಿದೆ. ಕರ್ನಾಟಕ ಪಬ್ಲಿಕ್ ಶಾಲೆಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದರು. ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಕಲಿಸಲಾಗುವುದು. 6ನೇ ತರಗತಿಯಿಂದಲೇ ಸ್ಕಿಲ್ ಸ್ಕೂಲ್ ಪ್ರಾರಂಭಿಸಲಾಗುವುದು ಎಂದು ಕೂಡ ಅವರು ವಿವರಿಸಿದ್ದಾರೆ.
ಕರ್ನಾಟಕದಲ್ಲಿ 58 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಇದರಿಂದಾಗಿ ಲಕ್ಷಾಂತರ ಅಭ್ಯರ್ಥಿಗಳು ಸರ್ಕಾರದ ಅಧಿಸೂಚನೆಗಾಗಿ ಕಾಯುತ್ತ ಕುಳಿತಿದ್ದರು. ಆಗಾಗ, ನೇಮಕಾತಿ ಮಾಡಿ ಎಂದು ಸರ್ಕಾರದ ಮೇಲೂ ಒತ್ತಡ ಹೇರಿದ್ದರು. ಈಗ ಕೊನೆಗೆ ರಾಜ್ಯ ಸರ್ಕಾರವು 26 ಸಾವಿರ ಶಿಕ್ಷಕರ ನೇಮಕಾತಿಗೆ ತೀರ್ಮಾನಿಸಿದೆ.