ಮಂಡ್ಯ ; ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕದಲ್ಲಿ ಮತ್ತೆ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಸಿಡಬ್ಲ್ಯುಆರ್‌ಸಿ (CWRC) ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿಹಿಡಿದಿರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸುವ ಆದೇಶದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರು, ಮಂಡ್ಯ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ತಮಿಳುನಾಡಿಗೆ ನೀರು ಬಿಡಬಾರದು ಎಂದು ಸರ್ಕಾರವನ್ನು ಒತ್ತಾಯಿಸುತ್ತಿವೆ.
ಈ ಮಧ್ಯೆ ಇಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ. ಮಂಡ್ಯದ ಶ್ರೀರಂಗಪಟ್ಟಣದ ಕೆಆರ್‌ಎಸ್ ಡ್ಯಾಂ ಬಳಿ ನಡೆಯಲಿರುವ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಸಂಸದ ಯದುವೀರ್ ಒಡೆಯರ್, ಶಾಸಕ ಸಿ.ಟಿ. ರವಿ, ವಿಧಾನ ಪರಿಷತ್ ಸದಸ್ಯ ಶ್ರೀವತ್ಸ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಕಾವೇರಿ ನೀರು ಹರಿಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ಕಾಂಗ್ರೆಸ್ ಸರ್ಕಾರದ ವೈಫಲ್ಯ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದನ್ನು ಸಿಡಬ್ಲ್ಯುಆರ್‌ಸಿ ಮುಂದೆ ಸರ್ಕಾರ ಸಮರ್ಥವಾಗಿ ಮಂಡಿಸಲು ವಿಫಲವಾಗಿದೆ ಎಂದು ಟೀಕಿಸಿರುವ ಬಿಜೆಪಿ, ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಇನ್ನು ಬಿಜೆಪಿ ನಾಯಕರು ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಮುತ್ತಿಗೆ ಹಾಕುವುದಾಗಿಯೂ ಹೇಳಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಕೆಆರ್‌ಎಸ್ ಜಲಾಶಯದ ಬಳಿ ಪ್ರತಿಭಟನೆ ಆರಂಭಿಸಿ, ನಂತರ ಅಣೆಕಟ್ಟಿಗೆ ಮುತ್ತಿಗೆ ಹಾಕಲಿದ್ದಾರೆ ಎನ್ನಲಾಗಿದೆ.
ಮಂಡ್ಯದಾದ್ಯಂತ ಪೊಲೀಸ್ ಸರ್ಪಗಾವಲು
ಅಹಿತಕರ ಘಟನೆಗಳನ್ನು ತಡೆಯಲು ಅಧಿಕಾರಿಗಳು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೆಆರ್‌ಎಸ್ ಸೇರಿದಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಒಟ್ಟು ಒಂದೂವರೆ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಬ್ಬರು ಎಸ್‌ಪಿ, ಒಂಬತ್ತು ಡಿವೈಎಸ್‌ಪಿ, ಇಪ್ಪತ್ತೇಳು ಇನ್ಸ್‌ಪೆಕ್ಟರ್‌ಗಳು, ನಲವತ್ತೈದು ಪಿಎಸ್‌ಐ ಮತ್ತು ಎಪ್ಪತ್ತೆಂಟು ಎಎಸ್‌ಐಗಳನ್ನು ಒಳಗೊಂಡಂತೆ ಭಾರಿ ಸಂಖ್ಯೆಯ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ಮಾಹಿತಿ ನೀಡಿದ್ದಾರೆ.
ಕಾವೇರಿ ನೀರು ಬಿಡುಗಡೆ ವಿಚಾರವಾಗಿ ರಾಜ್ಯಾದ್ಯಂತ ಪ್ರತಿಭಟನೆಗಳ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ರೈತರು ಹಾಗೂ ಕನ್ನಡಪರ ಸಂಘಟನೆಗಳು ರಾಜ್ಯದ ನೀರಿನ ಹಕ್ಕು ರಕ್ಷಣೆಗಾಗಿ ಹೋರಾಟ ಮುಂದುವರಿಸುವ ಎಚ್ಚರಿಕೆ ನೀಡಿವೆ.
ಇದನ್ನೂ ಓದಿ : ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ? ತಮಿಳುನಾಡು ಸಿಎಂ ವಿಜಯ್ ಒಲವು!



















