ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ.
ಸರ್ಕಾರಿ ನೌಕರರು ಖಾದಿ ಉಡುಪು ಧರಿಸುವ ಸಂಬಂಧ ರಾಜ್ಯಾಧ್ಯಕ್ಷರಾದ ಸಿಎಸ್ ಷಡಾಕ್ಷರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಾದ ಡಾ. ಶ್ರೀಮತಿ ಶಾಲಿನಿ ರಜನೀಶ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಖಾದಿ ಬಟ್ಟೆ ಧರಿಸುವ ಕುರಿತು ಚರ್ಚೆ ನಡೆಸಿದ್ದು, ಈ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಸಭೆ ಮಾಡಲಾಗಿದೆ.
ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು
- ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವುದು.
- ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು.
- ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ, ನೌಕರರಿಗೆ ಶೇ. 5% ಹೆಚ್ಚುವರಿ ರಿಯಾಯಿತಿ ನೀಡುವುದು.
- ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್,ಪ್ಯಾಂಟ್, ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು.
- ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ, ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳು.
- ಎಂಎಸ್ಐಎಲ್ ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು “ಸರ್ಕಾರಿ ನೌಕರರ ಕ್ಯಾಂಟೀನ್” ಪ್ರಾರಂಭಿಸಲು 2026-27ನೇ ಸಾಲಿನ ಆಯ-ವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡುವುದು.
- ಕೆಎಸ್ಐಸಿ ಸಂಸ್ಥೆಯು ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಖರೀದಿಸುವ ರೇಷ್ಮೆ ಸೀರೆ ಮತ್ತು ರೇಷ್ಮೆ ವಸ್ತ್ರಗಳಿಗೆ ಹೆಚ್ಚುವರಿ ಶೇ.5% ವಿಶೇಷ ರಿಯಾಯಿತಿ ನೀಡುತ್ತಿರುವ ಮಾದರಿಯಲ್ಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರಿಗೂ ಹೆಚ್ಚುವರಿ ಶೇ. 5% ವಿಶೇಷ ರಿಯಾಯಿತಿ ನೀಡುವುದು.
ಇದನ್ನೂ ಓದಿ : SBIನಲ್ಲಿ 2,273 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ



















