ಬೆಂಗಳೂರು: ರಾಜಧಾನಿ ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.) ಕಳೆದ ಎಂಟು ವರ್ಷಗಳಿಂದ ಆಯೋಜಿಸಿಕೊಂಡು ಬರುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ಹಬ್ಬ’ ಈ ಬಾರಿ ಜಾಗತಿಕ ಸ್ವರೂಪ ಪಡೆಯಲಿದೆ. ‘ವಿಶ್ವ ಕುಂದಾಪ್ರ ಕನ್ನಡ ಸಾಹಿತ್ಯ ಸಮ್ಮೇಳನ-2027’ ಸಮ್ಮೇಳನ ಜನವರಿ 30 ಮತ್ತು 31ರಂದು ಅದ್ಧೂರಿಯಾಗಿ ನಡೆಯಲಿದೆ.
ವಿಜಯನಗರದ ಬಂಟರ ಸಂಘದಲ್ಲಿ ಶನಿವಾರ ನಡೆದ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಸಮ್ಮೇಳನದ ಬಗ್ಗೆ ಬೃಹತ್ ಘೋಷಣೆ ಮಾಡಲಾಯಿತು.
ವಿಶ್ವದ ವಿವಿಧೆಡೆ ನಡೆಯುತ್ತಿರುವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಒಂದೇ ವೇದಿಕೆಯಲ್ಲಿ ಬೃಹತ್ ಮಟ್ಟದಲ್ಲಿ ಆಯೋಜಿಸಬೇಕು ಎಂಬ ಕಲ್ಪನೆ ಮತ್ತು ಕನಸಿನಿಂದ ಈ ಸಾಹಸಕ್ಕೆ ಮುಂದಾಗಿದ್ದೇವೆ, ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದ ರಾಯಲ್ ತ್ರಿಪುರವಾಸಿನಿಯಲ್ಲಿ ಸಮ್ಮೇಳನ ನಡೆಯಲಿದ್ದು, ಹಿಂದೆಂದಿಗಿಂತಲೂ ವೈಭವಯುತವಾಗಿ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ನಡೆಸಲಾಗುತ್ತಿದೆ. ಸಮ್ಮೇಳನಕ್ಕೆ ಸುಮಾರು ಮೂರು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು, ನಾಯಕ ನಟ ನಿರಂಜನ ಸುಧೀಂದ್ರ, ನಟ-ನಿರ್ಮಾಪಕ ಪ್ರಮೋದ್ ಶೆಟ್ಟಿ, ಚಿತ್ರಸಾಹಿತಿ ಪ್ರಮೋದ್ ಮರವಂತೆ, ಎ.ಎಸ್. ಕೇಟರರ್ಸ್‌ನ ಸತೀಶ್ ಶೆಟ್ಟಿ ಹಾಗೂ ಅಮರನಾಥ ಶೆಟ್ಟಿ ಹೆಗ್ಗುಂಜೆ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ವಿಭಿನ್ನ ರೀತಿಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ಸಾಹಿತ್ಯ ಸಮ್ಮೇಳನ-2027’ರ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯಕುಮಾರ್ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಪತ್ರಕರ್ತ ವಸಂತ್ ಗಿಳಿಯಾರ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಖಜಾಂಚಿ ವಿಜಯ್ ಶೆಟ್ಟಿ ಹಾಲಾಡಿ ಹಾಗೂ ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು ಉಪಸ್ಥಿತರಿದ್ದರು.


















