ಬೆಂಗಳೂರು : ಆಳಂದದ ಲಾಡ್ಲೆ ಮಶಾಕ್ ದರ್ಗಾ ಲಾಟೆ ಪ್ರಕರಣ ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಲು ಸೂಚಿಸಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ಇಂದು (ಜೂ.2) ಮಧ್ಯಾಹ್ನ 1 ಗಂಟೆಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ದೂರು ನೀಡಿದೆ.
ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣವನ್ನು ಸರ್ಕಾರ ವಾಪಸ್ ಪಡೆದಿದೆ. ಈ ನಿರ್ಧಾರವನ್ನು ರದ್ದುಗೊಳಿಸಲು ಸೂಚಿಸುವಂತೆ ರಾಜ್ಯಪಾಲರಿಗೆ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಕೇಸ್ ವಾಪಸ್ ಪಡೆದ ನಿರ್ಣಯ ರದ್ದುಪಡಿಸಲು ಸರ್ಕಾರಕ್ಕೆ ಸೂಕ್ತ ನಿರ್ದೇಶನ ಕೊಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಕರಣದ ಹಿನ್ನೆಲೆ :
2022ರ ಮಹಾಶಿವರಾತ್ರಿಯ ದಿನದಂದು ಆಳಂದದಲ್ಲಿ ನಡೆದ ಘಟನೆ ರಾಜ್ಯದ ಗಮನ ಸೆಳೆದಿತ್ತು. ಪಟ್ಟಣದ ಹಜರತ್ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಹಿಂದೂ ಭಕ್ತರು ಸಿದ್ಧತೆ ನಡೆಸಿದ್ದರು. ಆದರೆ, ಅದೇ ಸಂದರ್ಭದಲ್ಲಿ ಶಿವಲಿಂಗಕ್ಕೆ ಅವಮಾನ ಎಸಗಲಾಗಿದೆ ಮತ್ತು ಮಲಮೂತ್ರ ವಿಸರ್ಜನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಘಟನೆಯು ಸ್ಥಳೀಯವಾಗಿ ಉದ್ವಿಗ್ನತೆಯನ್ನು ಸೃಷ್ಟಿಸಿತು. ಪರಿಸ್ಥಿತಿ ತಿಳಿಗೊಳಿಸಲು ಹಾಗೂ ಸ್ಥಳವನ್ನು ಸ್ವಚ್ಛಗೊಳಿಸಿ ಪೂಜೆ ಸಲ್ಲಿಸಲು ಅಂದಿನ ಕೇಂದ್ರ ಸಚಿವ ಭಗವಂತ ಖೂಬಾ, ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಆಗಮಿಸಿದ್ದರು. ಈ ವೇಳೆ, ಗುಂಪೊಂದು ಅಧಿಕಾರಿಗಳ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೆ, ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿತ್ತು. ಈ ಗಲಭೆಗೆ ಸಂಬಂಧಿಸಿದಂತೆ ಸುಮಾರು 400ಕ್ಕೂ ಹೆಚ್ಚು ಮಂದಿಯ ಮೇಲೆ ಎಫ್‌ಐಆರ್ ದಾಖಲಾಗಿತ್ತು.
ಇದನ್ನೂ ಓದಿ : ನಾಳೆ ಸಿಎಂ ಪದಗ್ರಹಣ – ನಗರದ ಈ ರಸ್ತೆಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ!


















