ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗುಡ್ಡ ಕುಸಿತ ಭೀತಿಯಲ್ಲಿರುವ ಬೈಂದೂರಿನ ಒತ್ತಿನೆಣೆ ಪ್ರದೇಶಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೂಡಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಉಡುಪಿ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ನಂ. 66 ರಲ್ಲಿ ಕಂಡು ಬರುವ ಗುಂಡಿಗಳನ್ನು ತ್ವರಿತವಾಗಿ ಮುಚ್ಚಿಸಿ, ವಾಹನ ಸವಾರರಿಗೆ ಯಾವುದೇ ರೀತಿ ಸಮಸ್ಯೆಗಳಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕೆಂದು ಗುತ್ತಿಗೆದಾರ ಕಂಪನಿ ಐ.ಆರ್. ಬಿಗೆ ಸೂಚನೆ ನೀಡಿದರು.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ದೊಂಬೆ ರಸ್ತೆಯ ಸೋಮೇಶ್ವರದ ಗುಡ್ಡ ಕುಸಿತದ ಪ್ರದೇಶಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ಸೋಮೇಶ್ವರ ಬೀಚ್ ಬಳಿ ಪ್ರವಾಸೋದ್ಯಮ ಇಲಾಖೆ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.
ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ದುರ್ಗಿ ಪೂಜಾರ್ತಿ ಎಂಬುವವರು ಮನೆ ಕಳೆದುಕೊಂಡ ಹಿನ್ನೆಲೆಯಲ್ಲಿ, ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಈ ಸಮಯದಲ್ಲಿ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಲಾಗಿದ್ದು,ಸ್ಥಳದಲ್ಲೇ ಪರಿಹಾರ ಮೊತ್ತದ ನಡಾವಳಿ ಪತ್ರ ವಿತರಿಸಿದ್ದಾರೆ.

ಉಸ್ತುವಾರಿ ಸಚಿವರ ಜೊತೆ ಬೈಂದೂರು ಮಾಜಿ ಶಾಸಕ ಗೋಪಾಲ್ ಪೂಜಾರಿ, ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ , ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್.ಆರ್. ರಶ್ಮಿ, ಬೈಂದೂರು ತಹಶೀಲ್ದಾರ್ ಪ್ರದೀಪ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸ್ಥಳ ಪರಿಶೀಲನೆಯ ವೇಳೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು, ಕುಂದಾಪುರದ ಸುಪ್ರಸಿದ್ಧ ದೇವಸ್ಥಾನಗಳಲ್ಲೊಂದಾದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು.