ನವದೆಹಲಿ: ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಭೂಮಿಯನ್ನು ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ಣಾಯಕ ಚಾರ್ಜ್ ಶೀಟ್ ಸಲ್ಲಿಸಿದೆ.
ಚಾರ್ಜ್ ಶೀಟ್ ನಲ್ಲಿ 78 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ. ಶೇಷ ಸಿಬಿಐ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಉದ್ಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ನಿರ್ಣಾಯಕ ಚಾರ್ಜ್ ಶೀಟ್ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿದ್ದರು.
ಆರೋಪಿಗಳ ಪೈಕಿ ಮಾಜಿ ಕೇಂದ್ರ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಲಾಲು ಪ್ರಸಾದ್ ಯಾದವ್ 2004ರಿಂದ 2009ರವರೆಗೆ ಕೇಂದ್ರ ರೈಲ್ವೇ ಸಚಿವರಾಗಿದ್ದ ಸಂದರ್ಭದಲ್ಲಿ ತಮ್ಮ ಕುಟುಂಬ ಸದಸ್ಯರು ಮತ್ತು ಇತರರ ಹೆಸರಿಗೆ ಭೂ ಆಸ್ತಿ ವರ್ಗಾವಣೆಯ ಮೂಲಕ “ಆರ್ಥಿಕ ಅನುಕೂಲಗಳನ್ನು” ಸ್ವೀಕರಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.