ನವದೆಹಲಿ | ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೆಲೆಬ್ರಿಟಿಗಳ ಮೇಲೆ ವಿಪರೀತ ಟ್ರೋಲಿಂಗ್ ನಡೆಯುತ್ತಿರುವುದು ಗೊತ್ತೇ ಇದೆ. ಕೆಲವರು ನಕಲಿ ಖಾತೆಗಳನ್ನು ಸೃಷ್ಟಿಸಿ ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ನಿಂದನೆ ಮಾಡುತ್ತಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ಈಗಾಗಲೇ ಕೆಲ ತಾರೆಯರು ಈ ಸಂಬಂಧ ಪೊಲೀಸರಿಗೆ ದೂರು ನೀಡಿರುವುದು ಗೊತ್ತೇ ಇದೆ. ಇದೀಗ ಟಾಲಿವುಡ್ ನಟಿ, ಮೆಗಾ ಫ್ಯಾಮಿಲಿ ಸೊಸೆ ಲಾವಣ್ಯ ತ್ರಿಪಾಠಿ ಅವರಿಗೂ ಇಂತಹದ್ದೇ ಕಹಿ ಅನುಭವವಾಗಿದೆ. ಇದೀಗ ಅವರು ಕೂಡ ಪೊಲೀಸರಿಗೆ ದೂರು ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಗೌರವಕ್ಕೆ ಧಕ್ಕೆ ತರುವಂತೆ ಕೆಲವರು ಅಸಭ್ಯವಾಗಿ ಪೋಸ್ಟ್ ಹಾಕುತ್ತಿದ್ದಾರೆ, ಕಾಮೆಂಟ್ ಮಾಡುತ್ತಿದ್ದಾರೆ ಎಂದು ಲಾವಣ್ಯ ತ್ರಿಪಾಠಿ ಅವರು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ. ಮುಖ್ಯವಾಗಿ Purplecrayon00 ಎಂಬ ಇನ್ಸ್ಟಾಗ್ರಾಮ್ ಖಾತೆಯ ಮೂಲಕ ತಮ್ಮನ್ನು ಮತ್ತು ತಮ್ಮ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ನಿಂದಿಸಲಾಗುತ್ತಿದೆ ಎಂದು ಲಾವಣ್ಯ ತಿಳಿಸಿದ್ದಾರೆ. “ಈ ಕಿರುಕುಳ ಕಳೆದ ಕೆಲವು ಸಮಯದಿಂದ ನಡೆಯುತ್ತಿದ್ದು, ತಮ್ಮ ವೈಯಕ್ತಿಕ ಜೀವನ ಮತ್ತು ಘನತೆಗೆ ಹಾನಿ ಮಾಡುವ ಉದ್ದೇಶದಿಂದ ಸುಳ್ಳು ಪ್ರಚಾರ ಮಾಡಲಾಗುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.
ಲಾವಣ್ಯ ತ್ರಿಪಾಠಿ ಅವರ ದೂರಿನ ಮೇರೆಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಐಟಿ ಕಾಯ್ದೆ ಸೆಕ್ಷನ್ 67 ರ ಜೊತೆಗೆ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 78 ಮತ್ತು 79 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಆ ಇನ್ಸ್ಟಾಗ್ರಾಮ್ ಖಾತೆಯನ್ನು ಹ್ಯಾಂಡಲ್ ಮಾಡುತ್ತಿರುವ ವ್ಯಕ್ತಿಯನ್ನು ಗುರುತಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಆ ಖಾತೆಯ ಮೂಲಕ ಮಾಡಲಾಗಿರುವ ಅವಮಾನಕರ ಪೋಸ್ಟ್ಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಲಾವಣ್ಯ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ.. ಹೊಸ ದಿನಾಂಕದ ಮಾಹಿತಿ ಇಲ್ಲಿದೆ



















