ಬೆಂಗಳೂರು: ನಟ್ಟು, ಬೋಲ್ಟ್ ಸೆಟ್ ಮಾಡುವುದು ನನಗೆ ಗೊತ್ತಿದೆ ಎಂದು ಸಿನಿಮಾ ಮಂದಿ ಬಗ್ಗೆ ಹೇಳಿಕೆ ನೀಡಿದ್ದ ಡಿಕೆಶಿ ಮಾತಿಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಸದ್ಯ ಈ ಹೇಳಿಕೆ ಬಗ್ಗೆ ಡಿಸಿಎಂ ಮಾತನಾಡಿದ್ದಾರೆ.
“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಮಾತನಾಡಿದ ಅವರು, “ಚಿತ್ರರಂಗದ ಬಗ್ಗೆ ನಿಮ್ಮ ಮಾತುಗಳು ಒರಟಾಗಿವೆ ಎನ್ನುವ ಬಿಜೆಪಿ, ಚಿತ್ರರಂಗದವರ ಟೀಕೆಯ ಬಗ್ಗೆ ಕೇಳಿದಾಗ, “ನನಗೆ ಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ. ನಾನು ನೇರವಾಗಿ ಹೇಳುತ್ತೇನೆ. ನೀವು (ಮಾಧ್ಯಮದವರು), ಅವರು ಬಂಡೆ ಎಂದು ಕರೆಯುತ್ತಾರೆ. ಹಾಗಾದರೆ ನಾನು ಬಂಡೆಯೇ? ನಾನು ಬಂಡೆಯಂತೇ ಕಾಣುತ್ತೇನೆಯೇ? ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಇದು ನನ್ನ ಮಾತಿನ ಶೈಲಿ. ಶೈಲಿ ಸರಿ ಇಲ್ಲದಿದ್ದರೆ ಸರಿಪಡಿಸಿಕೊಳ್ಳುತ್ತೇನೆ, ಆದರೆ ಸತ್ಯ ಹೇಳಿದ್ದೇನೆ” ಎಂದರು.
ಮೇಕೆದಾಟು ಹೋರಾಟ ಕಾಂಗ್ರೆಸ್ ರೂಪಿಸಿದ ಹೋರಾಟ, ಇದರಲ್ಲಿ ಚಿತ್ರರಂಗದವರು ಹೇಗೆ ಭಾಗವಹಿಸಲು ಸಾಧ್ಯ ಎಂಬ ಪ್ರಶ್ನೆಗಳ ಬಗ್ಗೆ ಕೇಳಿದಾಗ, “ರಾಜ್ಯದ ನೆಲ, ಜಲ ಭಾಷೆ ರಕ್ಷಣೆಗೆ ಹೋರಾಟ ಮಾಡಬೇಕು. ಹಾಗಾದರೆ ಕಳಸಾ- ಬಂಡೂರಿ ಹೋರಾಟಕ್ಕೆ ಚಿತ್ರರಂಗದವರು ಏಕೆ ಹುಬ್ಬಳ್ಳಿಗೆ ಹೋದರು? ರಾಜಕುಮಾರ್ ಅವರು ಪಕ್ಷ ಬೇಧ ಮರೆತು ಹೋರಾಟಕ್ಕೆ ಏಕೆ ಬರುತ್ತಿದ್ದರು? ಹಾಗಾದರೆ ಈಗಿನ ಚಿತ್ರರಂಗದ ಜವಾಬ್ದಾರಿ ಏನು? ರಾಜಕುಮಾರ್ ಅವರು ಇವರಿಗೆ ಮಾದರಿ ಅಲ್ಲವೇ ಎಂದು ಪ್ರಶ್ನಿಸಿದರು.
ದುನಿಯಾ ವಿಜಯ್, ಪ್ರೇಮ್, ಸಾಧು ಕೋಕಿಲ, ಸಾ.ರಾ. ಗೋವಿಂದು ಮತ್ತಿತರರು ಹೋರಾಟದಲ್ಲಿ ಭಾಗವಹಿಸಿದ್ದರು. ಇವರೆಲ್ಲಾ ಕಾಂಗ್ರೆಸ್ ಪಕ್ಷದಿಂದ ಬಂದಿದ್ದರೇ? ನನ್ನ ಮನೆಗೆ ನೀರು ತರಲು ಹೋರಾಟ ಮಾಡಲಿಲ್ಲ. ಇಡೀ ಬೆಂಗಳೂರಿಗೆ ನೀರು ತರಲು ಹೋರಾಟ ಮಾಡಿದ್ದೇವೆ. ಬೆಂಗಳೂರಲ್ಲಿ ಚಿತ್ರರಂಗದವರೂ ಇದ್ದಾರೆ. ಬರೀ ಕಾಂಗ್ರೆಸ್ ಕಾರ್ಯಕರ್ತರು ಇಲ್ಲ. ಚಿತ್ರಂಗದವರು ಬರದೇ ಇದ್ದರೂ ಹೋರಾಟ ಮಾಡುತ್ತೇವೆ. ರಾಜಕೀಯವಾಗಿ ಯಾರ್ಯಾರದ್ದು ಏನೆನಿದೆ ಎಂದು ನನಗೆ ತಿಳಿದಿಲ್ಲವೇ? ಇನ್ನಾದರೂ ಬುದ್ದಿ ಕಲಿಯಿರಿ ಎಂದಷ್ಟೇ ಹೇಳುತ್ತಿದ್ದೇನೆ. ತಗೊಳ್ಳೋದು ಬಿಡೋದು ಅವರಿಗೆ ಬಿಟ್ಟದ್ದು” ಎಂದು ಹೇಳಿದ್ದಾರೆ.