ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ (Prosecution) ಅನುಮತಿ ನೀಡಿರುವುದನ್ನು ಕರ್ನಾಟಕ ಹೈಕೋರ್ಟ್ (High Court) ಎತ್ತಿ ಹಿಡಿದಿದೆ. ಈ ಮೂಲಕ ಸಿಎಂಗೆ ಹಿನ್ನಡೆಯಾಗಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಬಿಜೆಪಿ ಆಗ್ರಹಿಸಿದೆ.
ಎಕ್ಸ್ ಮೂಲಕ ಬಿಜೆಪಿ ಈ ಕುರಿತು ಮನವಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಹೈಕೋರ್ಟ್, ರಾಜ್ಯಪಾಲರ ಆದೇಶ ಎತ್ತಿ ಹಿಡಿದಿದೆ. ಹೀಗಾಗಿ ಹೈಕೋರ್ಟ್ ಆದೇಶವನ್ನು ಸಿಎಂ ಎತ್ತಿ ಹಿಡಿದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಕೋರ್ಟ್ ನಲ್ಲಿ ಸತ್ಯಕ್ಕೆ ಜಯವಾಗಿದೆ. ಹೈಕೋರ್ಟ್ ತೀರ್ಪನ್ನು ಸಿಎಂ ಸ್ವಾಗತ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದೆ. ಸಿಎಂ ರಾಜೀನಾಮೆ ನೀಡುವವರೆಗೂ ನಾವು ಹೋರಾಟ ನಡೆಸುತ್ತೇವೆ ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, “ಇದು ಸತ್ಯಕ್ಕೆ ಸಂದ ಜಯ. ಜಯತೆ, ಜಯತೆ, ಸತ್ಯಮೇವ ಜಯತೆ. ಸಿದ್ದರಾಮಯ್ಯ ಅವರು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ” ಎಂದು ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
“ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ” ಎಂದಿದೆ.
ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ.
ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪೋಸ್ಟ್ ನಲ್ಲಿ ಒತ್ತಾಯಿಸಿದೆ.