ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ರಾಜ್ಯೋತ್ಸವದ ಅಂಗವಾಗಿ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ಪಥಸಂಚಲನದಲ್ಲಿ ಭಾಗವಹಿಸಿದರು.

ಬಳಿಕ ಮಾತನಾಡಿದ ಸಚಿವೆ ” ನಮ್ಮ ರಾಜ್ಯದ ಸ್ವಾತಂತ್ರ ಹೋರಾಟಗಾರರು ವಿದೇಶಿಯರ ಆಡಳಿತದಿಂದ ದೇಶವನ್ನು ಮುಕ್ತಗೊಳಿಸುವುದರ ಜೊತೆಗೆ ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡ ಭಾಷೆಗಳನ್ನು ಒಂದುಗೂಡಿಸಿ ಕನ್ನಡ ನಾಡಿನ ಪುನರ್ ನಿರ್ಮಾಣ ಮಾಡುವ ಕನಸನ್ನು ಹೊಂದಿದ್ದರು. 1956 ನವೆಂಬರ್ 1ರಂದು ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬರುವುದರೊಂದಿಗೆ ಕನ್ನಡದ ಮನಸುಗಳು ಒಂದಾದವು. 1973 ರಲ್ಲಿ ದಿವಂಗತ ದೇವರಾಜ್ ಅರಸುರವರು ಕರ್ನಾಟಕ ರಾಜ್ಯವೆಂದು ಮರುನಾಮಕರಣ ಮಾಡಿದರು. ಕರ್ನಾಟಕ ರಾಜ್ಯ ನಿರ್ಮಾಣ ಮಾಡುವಲ್ಲಿ ಹಿರಿಯ ರಾಜಕೀಯ ಮುತ್ಸದ್ದಿಗಳು, ಸಾಹಿತಿಗಳು ಹಿರಿಯ ನಾಗರಿಕರ ತ್ಯಾಗ, ಬಲಿದಾನ ಅವಿಸ್ಮರಣೀಯ. ನಮ್ಮ ನಾಡು ನುಡಿಯನ್ನು ಉಳಿಸಿಕೊಳ್ಳುವುದರ ಜೊತೆಗೆ ನಮ್ಮ ಭಾಷೆ, ಕನ್ನಡ ಸಂಸ್ಕೃತಿಯನ್ನು ಮತ್ತಷ್ಟು ಶ್ರೀಮಂತ ಗೊಳಿಸುವ ಅವಶ್ಯಕತೆ ಇವತ್ತಿನ ದಿನಗಳಲ್ಲಿ ಇದೆ. ಸಾಮರಸ್ಯದಿಂದ ಕೂಡಿದ ಸಮೃದ್ಧ ಕನ್ನಡ ನಾಡನ್ನು ನಿರ್ಮಾಣ ಮಾಡೋಣ. ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸೋಣ. ಕನ್ನಡದ ನೆಲ,ಜಲ, ಸಂಸ್ಕೃತಿಯ ಏಳಿಗೆಗಾಗಿ ನಾವೆಲ್ಲ ಒಂದಾಗಿ ದುಡಿಯೋಣ”ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
ಇದನ್ನೂ ಓದಿ: ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ | ಸಿಎಂ ಸಿದ್ದರಾಮಯ್ಯ ಕರೆ!



















