ಬೆಂಗಳೂರು: ವ್ಯಕ್ತಿಯ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಸಿಐಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಒಡಿಶಾ ಮೂಲದ ಮಹೇಂದ್ರ ರಾಥೋಡ್ (42) ಎಂಬಾತನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಆತನ ಸಾವಿಗೆ ಕಾರಣರಾಗಿದ್ದ ಆರೋಪದಡಿ ಸಿಬ್ಬಂದಿಗೆ ಶಿಕ್ಷೆ ಪ್ರಕಟಿಸಲಾಗಿದೆ. ಜೀವನ್ ಭೀಮಾನಗರ ಠಾಣೆಯ ಅಂದಿನ ಅಪರಾಧ ವಿಭಾಗದ ಹೆಡ್ ಕಾನ್ಸ್‌ಟೇಬಲ್ ಎಜಾಜ್ ಖಾನ್, ಕಾನ್ಸ್‌ಟೇಬಲ್‌ಗಳಾದ ಕೇಶವ ಮೂರ್ತಿ, ಮೋಹನ್ ರಾಮ್ ಹಾಗೂ ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ 7 ವರ್ಷಗಳ ಸಜೆ ಹಾಗೂ 30 ಸಾವಿರ, 25 ಸಾವಿರ ರೂ.ಗಳ ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಜೀವನ್ ಭೀಮಾನಗರ ಠಾಣೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಶಂಕಿತ ಆರೋಪಿ ಮಹೇಂದ್ರ ರಾಥೋಡ್ ನನ್ನು ಕರೆತರಲಾಗಿತ್ತು. ಮಹೇಂದ್ರ ಕೆಲಸ ಮಾಡುತ್ತಿದ್ದ ಮನೆಯಲ್ಲೇ 3.2 ಲಕ್ಷ ರೂ. ಕಳ್ಳತನ ಮಾಡಿದ್ದ ಎಂಬ ಆರೋಪ ಎದುರಿಸುತ್ತಿದ್ದ. ಹೀಗಾಗಿ ಠಾಣೆಗೆ ಕರೆತರಲಾಗಿತ್ತು. ಆದರೆ, ಸಂಜೆ ವೇಳೆಗೆ ಉಸಿರಾಟದ ತೊಂದರೆ, ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದು ಸಾವನ್ನಪ್ಪಿದ್ದ. ಪೊಲೀಸ್ ಸಿಬ್ಬಂದಿಯ ನಿರ್ಲಕ್ಷ್ಯತೆ ಹಾಗೂ ದೈಹಿಕವಾಗಿ ಹಲ್ಲೆ ಮಾಡಿದ್ದರ ಪರಿಣಾಮವಾಗಿ ಆತನು ಪೊಲೀಸ್ ವಶದಲ್ಲಿದ್ದಾಗ ಸಾವನ್ನಪ್ಪಿರುವುದು ಸಿಐಡಿ ತನಿಖೆಯಲ್ಲಿ ದೃಢಪಟ್ಟಿತ್ತು. ಹೀಗಾಗಿ ವಿಚಾರಣೆ ನಡೆಸಿದ ಕೋರ್ಟ್ ಪೊಲೀಸ್ ಸಿಬ್ಬಂದಿಗೆ ಶಿಕ್ಷೆ ವಿಧಿಸಿದೆ.