ಮದ್ದೂರು (ಮಂಡ್ಯ) : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಿನ್ನೆ(ಆದಿತ್ಯವಾರ) ರಾತ್ರಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಹಾಗೂ ಇಂದು(ಸೋಮವಾರ) ಹಿಂದೂಪರ ಸಂಘಟನೆಗಳು ನಿನ್ನೆಯ ಘಟನೆಯನ್ನು ಖಂಡಿಸಿ ನಡೆಸಿದ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ ಬಿಜೆಪಿ, ಜೆಡಿಎಸ್ ಹಾಗೂ ಹಿಂದೂ ಪರ ಸಂಘಟನೆಗಳು ಜಂಟಿಯಾಗಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮುಖಂಡರಾದ ಸಿ.ಎಸ್. ಪುಟ್ಟರಾಜು, ಡಿ.ಸಿ ತಮ್ಮಣ್ಣ, ಅನ್ನದಾನಿ, ಸುರೇಶ್ ಗೌಡ, ಡಾ. ಸಿದ್ದರಾಮಯ್ಯ, ಎಸ್.ಪಿ ಸ್ವಾಮಿ ಗೌಡ, ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಇಂದ್ರೇಶ್, ಅಶೋಕ್ ಜಯರಾಮ್, ಸಿಪಾಯಿ ಶ್ರೀನಿವಾಸ್,ಕಿರಣ್ ಗೌಡ, ನಾಗೇಶ್ ಹಾಗೂ ನಾಲ್ಕೈದು ಸಾವಿರಕ್ಕೂ ಅಧಿಕ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಮತ್ತು ಸಾವಿರಾರು ಕಾರ್ಯಕರ್ತರು ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಂಸದಪ್ರತಾಪ್ ಸಿಂಹ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದರು. ಗಣೇಶೋತ್ಸವದಲ್ಲಿ ಭಾಗಿಯಾದ ಅಮಾಯಕರ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದ್ದು, ತೀವ್ರವಾಗಿ ಖಂಡಿಸುತ್ತೇವೆ, ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
