ಹುಬ್ಬಳ್ಳಿ : ಮದ್ದೂರಿನಲ್ಲಿ ಗಣೇಶೋತ್ಸವದ ಮೆರವಣಿಗೆ ನಡೆಯುತ್ತಿರುವ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದೆ. ಈ ಗಲಭೆಯನ್ನು ತಡೆಯುವ ಯೋಗ್ಯತೆಯೇ ಸರ್ಕಾರಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮದ್ದೂರು ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಗಣೇಶ ಮೆರವಣಿಗೆ ಮೇಲೆ ಮಸೀದಿ ಮೇಲ್ಗಡೆಯಿಂದ ಕಲ್ಲು ತೂರಾಟವಾಗಿದೆ. ಆದರೆ ಪೊಲೀಸರು ಅಮಾಯಕರ ಮೇಲೆ ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಅಸಮಧಾನ ಹೊರ ಹಾಕಿದ್ದಾರೆ.
ಮಸೀದಿ ಮೇಲ್ಗಡೆಯಿಂದ ಕಲ್ಲು ತೂರಾಟ ನಡೆಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಆರೋಪಿಗಳನ್ನು ಸರ್ಕಾರ ಬಂಧಿಸಿದೆ. ಆದರೆ ಇಂತಹ ಘಟನೆಗಳು ನಡೆಯದಂತೆ ಯಾವುದೇ ಮುನ್ನೆಚ್ಚರಿಕಾ ಕ್ರಮ ವಹಿಸಿಕೊಂಡಿಲ್ಲ. ಹಾಗಾಗಿಯೇ ಕಲ್ಲು ತೂರಾಟ ನಡೆದಿದೆ. ಇವತ್ತು ಅಮಾಯಕರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸರ್ಕಾರದ ಹಿಂದೂ ವಿರೋಧಿ ಮಾನಸಿಕತೆಯನ್ನು ಈ ಘಟನೆ ಸ್ಪಷ್ಟಪಡಿಸುತ್ತದೆ. ಸರ್ಕಾರ ಅಮಾಯಕರ ಮೇಲೆ, ಗಣೇಶ ಭಕ್ತರ ಮೇಲೆ ಲಾಠಿ ಪ್ರಹಾರ ಮಾಡುತ್ತಿದ್ದು, ಕೋಮುವಾದಿ ಕ್ರಿಮಿನಲ್ ಗಳಿಗೆ ಪ್ರೋತ್ಸಾಹ ಕೊಡುತ್ತಿದೆ. ಪೊಲೀಸರು ಗಣೇಶನ ಭಕ್ತರಿಗೆ ತೊಂದರೆ ಕೊಟ್ಟರೆ ಸುಮ್ಮನಿರಲ್ಲ ಉಗ್ರ ಹೋರಾಟ ಮಾಡಬೇಕಾಗುತ್ತದೆ, ನಾನೇ ಅಲ್ಲಿಗೆ ಬಂದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.