ಮುಂಬಯಿ: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ವಿರುದ್ಧ ಹೀನಾಯ ಸೋಲು ಕಂಡಿರುವ ಮಹಾ ವಿಕಾಸ್ ಅಘಾಡಿ (ಎಂವಿಎ)ಯ ಮೈತ್ರಿ ಪಕ್ಷಗಳು ಪ್ರಮಾಣ ವಚನ ಸ್ವೀಕರಿಸುವುದಿಲ್ಲ ಎನ್ನುತ್ತಿವೆ.
ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಈ ಕುರಿತು ಮಾತನಾಡಿದ್ದು, ಮತಯಂತ್ರಗಳ ಮೇಲೆ ಸಂಶಯ ವ್ಯಕ್ತಪಡಿಸಿ, ಪ್ರಮಾಣ ವಚನ ಸ್ವೀಕಾರದಿಂದ ದೂರ ಇರಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಇದು ಜನರಿಂದ ಬಂದ ತೀರ್ಪು ಅಲ್ಲ. ಇಲ್ಲಿ ಮಹಾ ಮೋಸ ನಡೆದಿದೆ. ಆ ಕಾರಣದಿಂದ ನಮ್ಮ ಮಹಾ ವಿಕಾಸ್ ಅಘಾಡಿ ಯಾವ ಶಾಸಕರು ಕೂಡ ಪ್ರಮಾಣವಚನ ಸ್ವೀಕಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ನಮಗೆ ಇಎಂವಿ ಬಗ್ಗೆ ಅನುಮಾನವಿದೆ. ಹೀಗಾಗಿ ಪ್ರಮಾಣ ವಚನ ಸ್ವೀಕರಿಸದೆ ನಾವು ಪ್ರತಿಭಟನೆ ನಡೆಸುತ್ತೇವೆ. ಹೀಗಾಗಿ ನಮ್ಮ ಶಾಸಕರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದಿದ್ದಾರೆ. ಹೊಸ ಸರ್ಕಾರ ರಚನೆಯ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ಶಾಸಕ ಕೊಲಂಬ್ಕರ್ ಅವರನ್ನು ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ.