ಡಾರ್ಜಿಲಿಂಗ್ : ಸಿಕ್ಕಿಂ ಹಾಗೂ ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಭೂಕುಸಿತ ಮತ್ತು ಪ್ರವಾಹದಿಂದಾಗಿ ಇದುವರೆಗೆ 17 ಜನರು ಸಾವನ್ನಪ್ಪಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿಯವರು, “ಪ್ರವಾಹದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದ್ದು, 17 ಜನರ ಸಾವು ತೀವ್ರ ನೋವುಂಟುಮಾಡಿದೆ” ಎಂದು ತಿಳಿಸಿದ್ದಾರೆ.
ಇನ್ನು ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗುತ್ತಿದ್ದಂತೆ ಪಶ್ಚಿಮ ಬಂಗಾಳ ಸರ್ಕಾರ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರ ಸಹಾಯಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ 24/7 ಕಂಟ್ರೋಲ್ ರೂಮ್ ತೆರೆದಿದ್ದಾರೆ. ಈಗಾಗಲೇ ಪರಿಸ್ಥಿತಿಯನ್ನು ಕಂಟ್ರೋಲ್ ರೂಮ್ ಮೂಲಕ ಮೇಲ್ವಿಚಾರಣೆ ಮಾಡುತ್ತಿದ್ದು, ನಾಳೆ (ಅ.6) ಖುದ್ದು ಮಮತಾ ಬ್ಯಾನರ್ಜಿ ಅವರೇ (ಅ.6) ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.
ಸಿಕ್ಕಿಂ ಸಂಪರ್ಕ ಕಡಿತ : ಡಾರ್ಜಲಿಂಗ್‌ನಲ್ಲಿ ಸಂಭವಿಸಿದ ಈ ವಿಪತ್ತು ಹಿಮಾಲಯ ರಾಜ್ಯವಾದ ಸಿಕ್ಕಿಂ ಜೊತೆಗಿನ ಸಂಪರ್ಕ ಕಡಿತಗೊಳಿಸಿದೆ. ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದ್ದು, ಪೊಲೀಸರು ಮತ್ತು ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.