ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಅಳ್ಳೋಳ್ಳಿ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಸಾಬಣ್ಣ ತಳವಾರ್ (43) ಎಂಬ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ.
ಹತ್ಯೆಯ ನಂತರ ಹಂತಕರು ಕ್ರೌರ್ಯ ಮೆರೆದಿದ್ದು, ಮೃತದೇಹವನ್ನು ಮರಕ್ಕೆ ನೇಣು ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ದೃಶ್ಯ ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಹಳೆ ವೈಷಮ್ಯವೇ ಈ ಹತ್ಯೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಯಾವ ಕಾರಣಕ್ಕೆ ಈ ಕೃತ್ಯ ನಡೆದಿದೆ, ಇದರಲ್ಲಿ ಎಷ್ಟು ಮಂದಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಸೇಡಂ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ. ಘಟನಾ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ತನಿಖೆಯ ಬಳಿಕ ಹತ್ಯೆಯ ನಿಖರ ಕಾರಣ ಹಾಗೂ ಆರೋಪಿಗಳ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.
ಇದನ್ನೂ ಓದಿ : ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ – ಐವರು ದುರ್ಮರಣ



















