ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಆಚೇಪಲ್ಲಿ ಕ್ರಾಸ್ ಸಮೀಪ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಕ್ತಿಯು ಸಜೀವ ದಹನಗೊಂಡ ದಾರುಣ ಘಟನೆ ತಡರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ಪೆನುಮಲೆ ಗ್ರಾಮದ 70 ವರ್ಷದ ಉದಯ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಕನಕಪುರ ರಸ್ತೆಯ ರಘುವನಹಳ್ಳಿ ಪ್ರದೇಶದಲ್ಲಿ ವಾಸವಿದ್ದು, ನೆನ್ನೆ ತಮ್ಮ ಸ್ವಗ್ರಾಮಕ್ಕೆ ಭೇಟಿ ನೀಡಿ ವಾಪಸ್ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮಧ್ಯರಾತ್ರಿ ಸುಮಾರು 12 ಗಂಟೆ ವೇಳೆಗೆ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಕಾರು ಧಗಧಗನೆ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಗೆ ಕಾರಿನಲ್ಲೇ ಸಿಲುಕಿದ ಉದಯ್ ಕುಮಾರ್ ಸುಟ್ಟು ಕರಕಲಾಗಿ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಬಾಗೇಪಲ್ಲಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ KSRTC ಬಸ್-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು



















