ಕರ್ನಾಟಕ ಕ್ರಿಕೆಟ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ವಿಜಯ ಹಝಾರೆ ಟೂರ್ನಿಯಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿ ಮಿಂಚಿದ್ದಾರೆ.
ಪಂಜಾಬ್ ಮತ್ತು ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಮಯಾಂಕ್ ಹೈದರಾಬಾದ್ ತಂಡದ ವಿರುದ್ಧವೂ ಶತಕ ಸಿಡಿಸಿದ್ದಾರೆ. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಆರಂಭಿಕರಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು.
ಆರಂಭದಿಂದಲೂ ಬಿರುಸಿನ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದ ಅನುಭವಿ ಆಟಗಾರ ಮಯಾಂಕ್, 2 ಸಿಕ್ಸರ್ ಹಾಗೂ 15 ಫೋರ್ ಗಳೊಂದಿಗೆ 112 ಎಸೆತಗಳಲ್ಲಿ 124 ರನ್ ಗಳಿಸಿದ್ದಾರೆ. ಈ ಮೂಲಕ ಪ್ರಸ್ತುತ ವಿಜಯ ಹಝಾರೆ ಟೂರ್ನಿಯಲ್ಲಿ ಬ್ಯಾಕ್ ಟು ಬ್ಯಾಕ್ ಮೂರು ಶತಕ ಸಿಡಿಸಿದ ದಾಖಲೆಗೆ ಪಾತ್ರರಾಗಿದ್ದಾರೆ.
ಇದಕ್ಕೂ ಮೊದಲು ಪಂಜಾಬ್ ವಿರುದ್ಧ 127 ಎಸೆತಗಳಲ್ಲಿ 139 ರನ್ ಗಳಿಸಿದ್ದರು. ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ 45 ಎಸೆತಗಳಲ್ಲಿ ಅಜೇಯ 100 ರನ್ ಗಳಿಸಿದ್ದರು. ಹೈದರಾಬಾದ್ ವಿರುದ್ಧ ಕೂಡ ಮೂರಂಕಿ ಮೊತ್ತ ಗಳಿಸಿದ್ದಾರೆ.
ಈ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ಗೆ ಉತ್ತಮ ಸಾಥ್ ನೀಡಿದ ಸ್ಮರಣ್ 75 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 83 ರನ್ ಗಳಿಸಿದರು. ಪರಿಣಾಮ ಕರ್ನಾಟಕ ತಂಡವು 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 320 ರನ್ ಗಳಿಸಿದೆ.