ಬೆಂಗಳೂರು : ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ಋತುಚಕ್ರ ರಜೆಯನ್ನು ನೀಡಿದ ರಾಜ್ಯ ಸರ್ಕಾರದ ಇತ್ತೀಚಿನ ಆದೇಶದ ವಿರುದ್ಧ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್, ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರವೆಂದು ಹೈಕೋರ್ಟ್ ನ್ಯಾ. ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ.
ಉಚ್ಚ ನ್ಯಾಯಾಲಯದ ಮುಂದೆ ಇಂದು ಹೋಟೆಲ್ ಮಾಲೀಕರ ಸಂಘದ ಅರ್ಜಿ ವಿಚಾರಣೆಗೆ ಬಂದಿದ್ದು, ಸಂಘದ ಪರ ವಕೀಲರಾದ ಪ್ರಶಾಂತ್ ಬಿ.ಕೆ ವಾದ ಮಂಡಿಸಿದ್ದರು. ಕರ್ನಾಟಕ ಸರ್ಕಾರ ನವೆಂಬರ್ 12ರಂದು ವೇತನ ಸಹಿತ ಮುಟ್ಟಿನ ರಜೆ ಕಡ್ಡಾಯಗೊಳಿಸುವ ನಿರ್ಧಾರ ತೆಗೆದುಕೊಂಡಿತ್ತು. ಕಾರ್ಮಿಕ ಇಲಾಖೆಯ ಕಾರ್ಖಾನೆ ಕಾಯ್ದೆ, ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆ ಸೇರಿದಂತೆ ಹಲವಾರು ಕಾರ್ಮಿಕ ಕಾನೂನುಗಳ ವ್ಯಾಪ್ತಿಗೆ ಬರುವ ಸಂಸ್ಥೆಗಳು ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಒದಗಿಸುವಂತೆ ಆದೇಶವನ್ನು ಹೊರಡಿಸಿತ್ತು.
ಆದರೆ, ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರಕ್ಕೆ ಅಂತಹ ಆದೇಶವನ್ನು ವಿಧಿಸಲು ಕಾರ್ಮಿಕ ಕಾನೂನುಗಳ ಪ್ರಕಾರ ಅಧಿಕಾರವಿಲ್ಲವೆಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಹೈಕೋರ್ಟ್ ಮೆಟ್ಟಿಲೇರಿತ್ತು. ಸರ್ಕಾರವು 1948 ರ ಕಾರ್ಖಾನೆ ಕಾಯ್ದೆ, 1961 ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1951 ರ ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, 1966 ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು 1961 ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಂಸ್ಥೆಗಳಿಗೆ ಮೇಲೆ ತಿಳಿಸಿದ ನೀತಿಯನ್ನು ಅನುಸರಿಸಲು ನಿರ್ದೇಶನ ನೀಡುವ ಅಧಿಸೂಚನೆಯನ್ನು ಹೊರಡಿಸಿದೆ. ಆದರೆ ರಜೆ ನೀತಿಗಳು ವೈಯಕ್ತಿಕ ಸಂಸ್ಥೆಗಳಿಗೆ ಆಂತರಿಕ ಆಡಳಿತಾತ್ಮಕ ವಿಷಯವಾಗಿ ಉಳಿಯಬೇಕು ಎಂದು ಹೋಟೆಲ್ ಮಾಲೀಕರ ಸಂಘ ಅರ್ಜಿ ಸಲ್ಲಿಸಿತ್ತು.
ಇದನ್ನೂ ಓದಿ : ಭಾರತ ಅಕ್ಕಿ ತಂದು ನಮ್ಮ ದೇಶದಲ್ಲಿ ಸುರಿಯುತ್ತಿದೆ : ಭಾರತದ ಅಕ್ಕಿ ಆಮದಿನ ಮೇಲೆಯೂ ಟ್ರಂಪ್ ಸುಂಕ ಬೆದರಿಕೆ



















