ದೆಹಲಿ: ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಅವರು ಮತ್ತೊಂದು ಮಹತ್ವದ ಭೇಟಿ ನಡೆಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಜಮೀರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಂಪುಟ ಪುನಾರಚನೆ ಚರ್ಚೆಯ ನಡುವೆ ಜಮೀರ್ ಅವರ ಈ ದಿಢೀರ್ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಮೀರ್ ಅವರಿಗೆ ಸಚಿವ ಸ್ಥಾನಕ್ಕೆ ಕುತ್ತು ಬರುವ ಆತಂಕ ಎದುರಾಗಿದೆಯೇ ಎಂಬ ಚರ್ಚೆ ಶುರುವಾಗಿದೆ. ಸಂಪುಟದಿಂದ ಕೈಬಿಡುವ ಭೀತಿಯಿಂದ ಹೈಕಮಾಂಡ್ ನಾಯಕರ ಅಭಯ ಪಡೆಯಲು ಜಮೀರ್ ದೆಹಲಿಯಲ್ಲಿ ಕಸರತ್ತು ನಡೆಸುತ್ತಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ. ವೇಣುಗೋಪಾಲ್ ಅವರೊಂದಿಗಿನ ಭೇಟಿಯಲ್ಲಿ ಸಂಪುಟ ವಿಚಾರ ಮತ್ತು ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆಯಾಗಿರುವ ಸಾಧ್ಯತೆಯಿದೆ. ಈ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರಗಳಿದ್ದು ಜಮೀರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
















