ಬೆಂಗಳೂರು : ದೇವಸ್ಥಾನಕ್ಕೆ ಹೋಗೋಣ ಎಂದು ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ, ಮಧ್ಯಪಾನ ಮಾಡಿಸಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 17ರಂದು ರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನವೀನ್, ವೆಂಕಟರಮಣ ಮತ್ತು ರೇಣುಕಾ ಎಂದು ಗುರುತಿಸಲಾಗಿದೆ.
ಆರೋಪಿಗಳ ಪೈಕಿ ರೇಣುಕಾ ಎಂಬಾಕೆ ದೇವಸ್ಥಾನಕ್ಕೆ ಹೋಗೋಣ ಎಂದು ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದುಕೊಂಡು ಬಂದಿದ್ದಳು ಎನ್ನಲಾಗಿದೆ. ಬಳಿಕ ರೇಣುಕಾ, ವೆಂಕಟರಮಣ ಮತ್ತು ನವೀನ್ ಸೇರಿಕೊಂಡು ಅಪ್ರಾಪ್ತೆಯನ್ನು ಆಟೋದಲ್ಲಿ ಬೇರೆಡೆಗೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಗೆ ಮಧ್ಯಪಾನ ಮಾಡಿಸಿ, ಹಲ್ಲೆ ನಡೆಸಿ, ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಇಬ್ಬರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ರಾತ್ರಿ ಪೂರ್ತಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಬಳಿಕ, ಬೆಳಗ್ಗೆ ಆಕೆಯನ್ನು ಮನೆ ಬಳಿ ಬಿಟ್ಟು ಹೋಗಿದ್ದಾರೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎನ್ನಲಾಗಿದೆ.
ರಾತ್ರಿಯಿಡೀ ಮನೆಗೆ ಬಾರದೆ ಬೆಳಗ್ಗೆ ಮನೆಗೆ ಬಂದ ಮಗಳನ್ನು ಕಂಡು ತಾಯಿ ಅನುಮಾನಗೊಂಡು ವಿಚಾರಿಸಿದ್ದಾರೆ. ಈ ವೇಳೆ ಅಪ್ರಾಪ್ತೆ ತನ್ನ ಮೇಲೆ ನಡೆದ ಘಟನೆಯನ್ನು ತಾಯಿಗೆ ತಿಳಿಸಿದ್ದಾಳೆ.
ಬಳಿಕ ಅಪ್ರಾಪ್ತೆ ನೀಡಿದ ದೂರಿನ ಆಧಾರದ ಮೇಲೆ ದೇವನಹಳ್ಳಿ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್, ವೆಂಕಟರಮಣ ಮತ್ತು ರೇಣುಕಾ ಅವರನ್ನು ಬಂಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಮೈಸೂರಲ್ಲಿ ಪ.ಬಂಗಾಳದ ಯುವತಿ ಮೇಲೆ ಗ್ಯಾಂಗ್ ರೇಪ್ – 24 ಗಂಟೆಯಲ್ಲೇ ಆರೋಪಿಗಳ ಬಂಧನ!


















