ಬೆಂಗಳೂರು ಗ್ರಾಮಾಂತರ: ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನವೇ ಕಿಡಿಗೇಡಿಗಳ ಅವಾಂತರವೊಂದು ಬೆಳಕಿಗೆ ಬಂದಿದೆ.
ಇಂದಿನಿಂದ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಕ್ಕೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಈ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಸರ್ಕಾರದ ಆದೇಶದಂತೆ ವಿದ್ಯಾರ್ಥಿಗಳ ಪರೀಕ್ಷೆಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಸಕಲ ಸಿದ್ಧತೆ ಕಲ್ಪಿಸಲಾಗಿತ್ತು. ಆದರೆ, ರಾತ್ರೋರಾತ್ರಿ ಕಿಡಿಗೇಡಿಗಳು ಶಾಲೆಯ ಬಾಗಿಲು ಮುರಿದು, ಒಳ ನುಗ್ಗಿ 6 ಸಿಸಿಟಿವಿ ಕ್ಯಾಮೆರಾಗಳನ್ನು ನಾಶ ಮಾಡಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.