ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿನ ನಿವಾಸದ ಮೇಲೆ ರಾತ್ರಿ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಮನೆಯ ಬೃಹತ್ ಗಾತ್ರದ ಕಿಟಕಿ ಗಾಜು ಪುಡಿ ಪುಡಿಯಾಗಿವೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಹಾಗೂ ವೃತ್ತ ನಿರೀಕ್ಷಕ ಮಂಜುನಾಥ್ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆಯ ಹಿಂಭಾಗದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಇದರ ಆಧಾರದ ಮೇಲೆ ಕಲ್ಲು ತೂರಾಟ ನಡೆಸಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಈ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.