ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದಿರುವ ಘಟನೆ ನಡೆದಿದೆ.
ಬಿಡನಾಳ ಮಾರುತಿ ನಗರದ ಪ್ರತಾಪ (32) ಚಾಕು ಇರಿತಕ್ಕೆ ಒಳಗಾದ ಯುವಕ ಎನ್ನಲಾಗಿದೆ. ಗಣೇಶ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಪ್ರತಾಪ, ಮೂತ್ರ ವಿಸರ್ಜನೆಗೆಂದು ಹೋಗುತ್ತಿದ್ದಾಗ ದುಷ್ಕರ್ಮಿಗಳು ಏಕಾಏಕಿ ಬಂದು ಚಾಕುವಿಂದ ಮೂರು ಕಡೆ ಇರಿದಿದ್ದಾರೆ. ಸೋನಿಯಾ ಗಾಂಧಿ ನಗರದ ಶಿರಿ ಹಾಗೂ ಮತ್ತಿಬ್ಬರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಕೃತ್ಯಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಯುವಕನನ್ನು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಮಹಾನಿಂಗ ನಂದಗಾವಿ, ಎಸಿಪಿ ಶಿವಪ್ರಕಾಶ ನಾಯ್ಕ ಭೇಟಿ ನೀಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.