ಯಾದಗಿರಿ: ಇದೇ ಡಿಸೆಂಬರ್ 2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ್ ಸರ್ಕಾರದ ಸೌಲಭ್ಯಗಳನ್ನು ನಿರಾಕರಿಸಿದ್ದಾರೆ.
ಅಧಿವೇಶನದ ವೇಳೆ ಸರ್ಕಾರದಿಂದ ನೀಡುವ ಊಟೋಪಚಾರದ ಭತ್ಯೆ ಹಾಗೂ ಇತರ ಸೌಲಭ್ಯಗಳು ತಮಗೆ ಬೇಡ ಎಂದು ಅವರು ವಿಧಾನಸಭಾ ಸಭಾಪತಿಗಳಿಗೆ ಪತ್ರ ಬರೆದಿದ್ದಾರೆ. ಕಳೆದ ವರ್ಷವೂ ತಾವು ಯಾವುದೇ ಸರ್ಕಾರಿ ಸೌಲಭ್ಯ ಪಡೆದಿರಲಿಲ್ಲ, ಈ ವರ್ಷವೂ ತಮ್ಮ ಸ್ವಂತ ಖರ್ಚಿನಲ್ಲೇ ಅಧಿವೇಶನದಲ್ಲಿ ಪಾಲ್ಗೊಳ್ಳುವುದಾಗಿ ಶಾಸಕರು ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತದೆಯಾದರೂ, ಹಲವಾರು ವಿಷಯಗಳು ಜಾರಿಯಾಗುತ್ತಿಲ್ಲ ಎಂದು ಉತ್ತರ ಕರ್ನಾಟಕದ ನಿರ್ಲಕ್ಷ್ಯಕ್ಕೆ ಶಾಸಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
















