ಬೆಂಗಳೂರು : ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಮಾಸ್ಟರ್ ಪ್ಲ್ಯಾನ್ ರೂಪಿಸಿವೆ. ಮೊದಲ ಅಧಿವೇಶನದಲ್ಲೇ ಸರ್ಕಾರದ ವಿರುದ್ಧ ಹಲವು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸಲು ವಿಪಕ್ಷಗಳು ಸಜ್ಜಾಗಿವೆ.
ವಾಲ್ಮೀಕಿ ನಿಗಮ ಹಗರಣ ಪ್ರಕರಣವನ್ನು ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಬಿಜೆಪಿ-ಜೆಡಿಎಸ್ ನಿರ್ಧರಿಸಿದ್ದು, ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವ ವಿಚಾರವನ್ನೇ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ. ಈ ವಿಚಾರದಲ್ಲಿ ಸರ್ಕಾರವನ್ನು ಸದನದೊಳಗೆ ಉತ್ತರಿಸುವಂತೆ ಒತ್ತಡ ಹೇರಲು ವಿಪಕ್ಷಗಳು ಸಿದ್ಧತೆ ನಡೆಸಿವೆ.
ಇನ್ನು, ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟವನ್ನೂ ಅಧಿವೇಶನದಲ್ಲಿ ಪ್ರಸ್ತಾಪಿಸಲು ದೋಸ್ತಿ ಪಕ್ಷಗಳು ತಯಾರಿ ನಡೆಸಿವೆ. ರೈತರ ಸಮಸ್ಯೆಗಳು, ಮಳೆ ಕೊರತೆ, ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆ ಸೇರಿದಂತೆ ಕೃಷಿ ಸಂಬಂಧಿತ ಸಮಸ್ಯೆಗಳನ್ನು ಮುಂದಿಟ್ಟು ಸರ್ಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ. ಬೆಳೆಹಾನಿಗೆ ಸಮರ್ಪಕ ಪರಿಹಾರ ಸಿಕ್ಕಿಲ್ಲ ಎಂಬ ಆರೋಪವನ್ನೂ ವಿಪಕ್ಷಗಳು ಪ್ರಸ್ತಾಪಿಸಲಿವೆ.
ರಾಜ್ಯದ ಕಾನೂನು ಸುವ್ಯವಸ್ಥೆ ವಿಚಾರದಲ್ಲೂ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ-ಜೆಡಿಎಸ್ ಸಿದ್ಧವಾಗಿವೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳು ಹಾಗೂ ಕಾನೂನು ಸುವ್ಯವಸ್ಥೆಯ ಕುರಿತು ಸರ್ಕಾರದಿಂದ ಉತ್ತರ ಪಡೆಯಲು ವಿಪಕ್ಷಗಳು ಮುಂದಾಗಲಿವೆ.
ಪಶುವೈದ್ಯರ ನೇಮಕಾತಿಯಲ್ಲಿ ಕೆಪಿಎಸ್‌ಸಿ ಅಕ್ರಮ ನಡೆದಿದೆ ಎಂಬ ಆರೋಪವೂ ಅಧಿವೇಶನದಲ್ಲಿ ಪ್ರತಿಧ್ವನಿಸುವ ಸಾಧ್ಯತೆ ಇದೆ. ಇದರ ಜೊತೆಗೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ತಲುಪುತ್ತಿರುವ ರೀತಿಯ ಬಗ್ಗೆಯೂ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿ-ಜೆಡಿಎಸ್ ಸಿದ್ಧತೆ ಮಾಡಿಕೊಂಡಿವೆ.
ಬಿಜೆಪಿ-ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಆರೋಪವನ್ನೂ ಸದನದಲ್ಲಿ ಪ್ರಸ್ತಾಪಿಸಲು ದೋಸ್ತಿ ಪಕ್ಷಗಳು ಮುಂದಾಗಿವೆ. ಶಾಸಕರ ಕ್ಷೇತ್ರವಾರು ಅನುದಾನ ಕೊರತೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ವಿಳಂಬದ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ.
ಹೀಗೆ ವಾಲ್ಮೀಕಿ ನಿಗಮ ಹಗರಣದಿಂದ ಹಿಡಿದು ರೈತರ ಸಮಸ್ಯೆ, ಕಾನೂನು ಸುವ್ಯವಸ್ಥೆ, ಕೆಪಿಎಸ್‌ಸಿ ನೇಮಕಾತಿ, ಗ್ಯಾರಂಟಿ ಯೋಜನೆಗಳು ಹಾಗೂ ಅನುದಾನ ತಾರತಮ್ಯದವರೆಗೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಮೇಲ್ಮನೆ ಮತ್ತು ಕೆಳಮನೆಯಲ್ಲಿ ಬಿಜೆಪಿ-ಜೆಡಿಎಸ್ ಸರ್ಕಾರದ ವಿರುದ್ಧ ಸಮರಕ್ಕೆ ಸಜ್ಜಾಗಿವೆ.
ಇದನ್ನೂ ಓದಿ : ಇಂದು ಅಖಂಡ ಕರ್ನಾಟಕ ಬಂದ್ ; ಬೆಂಗಳೂರಲ್ಲಿ ನೀರಸ ಪ್ರತಿಕ್ರಿಯೆ.. ಎಂದಿನಂತೆ ಬಸ್ ಸಂಚಾರ!


















