ಮಂಗಳೂರು : ಕೌಟುಂಬಿಕ ಕಲಹದ ವಿಚಾರಕ್ಕೆ ದೂರು ನೀಡಲು ಬಂದ ಮಹಿಳೆಯರನ್ನು ಅಸಭ್ಯವಾಗಿ ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸಿಪಿ (ACP) ನೀಡಿದ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋ ಮತ್ತು ಆಡಿಯೋ ತುಣುಕುಗಳಲ್ಲಿ ಇನ್ಸ್‌ಪೆಕ್ಟರ್ ಅವರ ವರ್ತನೆ ಅತ್ಯಂತ ಅನುಮಾನಾಸ್ಪದವಾಗಿತ್ತು. ವಿಶೇಷವಾಗಿ ಫೋನ್‌ನಲ್ಲಿ ಮಹಿಳೆಯೊಬ್ಬರ ಜೊತೆ ಅವರು ನಡೆಸಿದ ಅಸಭ್ಯ ಸಂಭಾಷಣೆಯು ಪೊಲೀಸ್ ಇಲಾಖೆಯ ಘನತೆಗೆ ಕುಂದು ತಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇನ್ನು, ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ರಾಜ್ಯ ಮಹಿಳಾ ಆಯೋಗವು ಸಿಡಿದೆದ್ದಿದ್ದು, ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣ ಸಂಬಂಧ ವರದಿ ನೀಡುವಂತೆ ಮಂಗಳೂರ ನಗರ ಪೊಲೀಸ್ ಕಮಿಷನರ್ಗೆ ಪತ್ರ ಬರೆದಿದೆ.
ಇದನ್ನೂ ಓದಿ : SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್!



















