ಬೆಂಗಳೂರು : ಪೀಣ್ಯ ಫ್ಲೈಓವರ್‌ನಲ್ಲಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆ ಇಂದಿನಿಂದ ಆಗಸ್ಟ್ 5ರವರೆಗೆ ನೆಲಮಂಗಲದಿಂದ ಬೆಂಗಳೂರಿನ ಕಡೆಗೆ ಬರುವ ಮಾರ್ಗದಲ್ಲಿ ರಾತ್ರಿ ವೇಳೆ ಫ್ಲೈಓವರ್ ಸಂಚಾರವನ್ನು ಬಂದ್ ಮಾಡಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಫ್ಲೈಓವರ್‌ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಶನಿವಾರ ಹಾಗೂ ಭಾನುವಾರ ಮಾತ್ರ ರಾತ್ರಿ 12 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಫ್ಲೈಓವರ್ ಬಂದ್ ಇರಲಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೆ ಈ ಸಂಚಾರ ನಿರ್ಬಂಧ ಜಾರಿಯಲ್ಲಿರಲಿದೆ.
ನೆಲಮಂಗಲದಿಂದ ಬೆಂಗಳೂರಿನ ಕಡೆಗೆ ಬರುವ ವಾಹನಗಳು ಕೆನ್ನಮೆಟಲ್ ಫ್ಯಾಕ್ಟರಿ ಸಮೀಪ ಫ್ಲೈಓವರ್ ಕೆಳಭಾಗದ ರಾಷ್ಟ್ರೀಯ ಹೆದ್ದಾರಿ–4 (NH-4) ಹಾಗೂ ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ ತಲುಪಿ, ಅಲ್ಲಿಂದ ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್.ಆರ್.ಎಸ್. ಜಂಕ್ಷನ್ ಹಾಗೂ ಗೊರಗುಂಟೆಪಾಳ್ಯ ಮಾರ್ಗವಾಗಿ ಸಂಚರಿಸುವಂತೆ ಸೂಚಿಸಲಾಗಿದೆ.
ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವ ಮೂಲಕ ಸಂಚಾರ ದಟ್ಟಣೆ ತಪ್ಪಿಸಿ, ಸಂಚಾರ ಪೊಲೀಸರೊಂದಿಗೆ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ‘ನಿನ್ನ ರೇಟ್ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!



















