ಮೈಸೂರು: ಸಂಸಾರದಲ್ಲಿ ಕಲಹ ಉಂಟಾದ ಹಿನ್ನೆಲೆ ಗಂಡನನ್ನೇ ಕೊಲೆ ಮಾಡಲು ಸ್ಕೆಚ್ ಹಾಕಿ ಸಿಕ್ಕಿಬಿದ್ದ ಖತರ್ನಾಕ್ ಪತ್ನಿ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.
ಕೊಲೆಗೈಯಲು ಸಹೋದರನ ನೆರವನ್ನು ಪಡೆದು, ದರೋಡೆ ಸನ್ನಿವೇಶ ಸೃಷ್ಟಿಸಿ ತಪ್ಪಿಸಿಕೊಳ್ಳುವ ಹುನ್ನಾರ ನಡೆಸಿದ ಪತ್ನಿ ಪೊಲೀಸರು ಹೆಣೆದ ಬಲೆಗೆ ಬಿದ್ದಿದ್ದಾಳೆ. ಸಹೋದರ ಹಾಗೂ ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಂಪ್ಯೂಟರ್ ಆಪರೇಟರ್ ಆಗಿರುವ ಪತ್ನಿ ಸಂಗೀತಾ, ಈಕೆಯ ಸಹೋದರ ಸಂಜಯ್, ಈತನ ಸ್ನೇಹಿತ ವಿಘ್ನೇಶ್ ಹಾಗೂ ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಫೈಬರ್ ಡೋರ್ಗಳನ್ನು ಫಿಟ್ ಮಾಡುವ ವೃತ್ತಿ ನಡೆಸುತ್ತಿದ್ದ ರಾಜೇಂದ್ರ ಅವರನ್ನು ಡ್ರ್ಯಾಗರ್ನಿಂದ ಇರಿದು ಹತ್ಯೆ ಮಾಡಲು ಯತ್ನಿಸಿದ ಪತ್ನಿಯ ಸಂಚನ್ನು ಬಯಲು ಮಾಡುವಲ್ಲಿ ನಂಜನಗೂಡು ಪೊಲೀಸರು ಸಕ್ಸಸ್ ಆಗಿದ್ದಾರೆ.
ಕೌಟುಂಬಿಕ ಕಲಹದ ಹಿನ್ನೆಲೆ ಇಬ್ಬರ ನಡುವೆ ಸಾಮರಸ್ಯ ಇರಲಿಲ್ಲ. ಅಕ್ಟೋಬರ್ 25 ರಂದು ರಾಜೇಂದ್ರ ಅವರು ಪತ್ನಿ ಸಂಗೀತಾಳನ್ನ ತಮ್ಮ ಸ್ಕೂಟರ್ನಲ್ಲಿ ಕೂರಿಸಿಕೊಂಡು ನಂಜನಗೂಡಿನ ಹುಂಡುವಿನಹಳ್ಳಿ ಬಡಾವಣೆಯ ಮುಡಾ ಲೇಔಟ್ ಬಳಿ ತೆರಳುತ್ತಿದ್ದಾಗ ಮುಂದೆ ಸಾಗುತ್ತಿದ್ದ ಬಿಳಿ ಬಣ್ಣದ ಕಾರು ಅಡ್ಡವಾಗಿ ಬಂದು ನಿಂತಿದೆ.
ನಂತರ ಈ ಕಾರಿನಲ್ಲಿದ್ದ ವ್ಯಕ್ತಿ ಹತ್ತಿರ ಬಂದು ಸ್ಕೂಟರ್ ಬೀಳಿಸಿದ್ದಾನೆ. ಆಗ ರಾಜೇಂದ್ರ ಹಾಗೂ ಸಂಗೀತಾ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ವ್ಯಕ್ತಿ ರಾಜೇಂದ್ರ ಜೊತೆ ಜಗಳ ಮಾಡಿದ್ದಾನೆ. ಇದೇ ವೇಳೆ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಂಗೀತಾ ಬಳಿ ಬಂದು ಕುತ್ತಿಗೆಯಲ್ಲಿದ್ದ ಚೈನ್ ಕಸಿಯಲು ಯತ್ನಿಸಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ರಾಜೇಂದ್ರ ಅವರಿಗೆ ತಿವಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಹೃದಯ ವಿದ್ರಾವಕ ಘಟನೆ | ನಾಳೆ ಮದುವೆ ಆಗಬೇಕಿದ್ದ ಯುವತಿ ಹೃದಯಾಘಾತಕ್ಕೆ ಬಲಿ!



















