ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಇಂದು (ಗುರುವಾರ) ಆಹ್ವಾನಿಸಲಾಯಿತು.
ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಫಲಪುಷ್ಪ ನೀಡಿ ರೇಷ್ಮೆ ಶಾಲು, ಹಾರ ಹಾಕಿ ಆಹ್ವಾನ ಪತ್ರಿಕೆ ನೀಡಿ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಜಿಲ್ಲಾಡಳಿತದಿಂದ ಆಮಂತ್ರಿಸಲಾಯಿತು.
ನಂತರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೂ ದಸರಾ ಉದ್ಘಾಟನೆ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಯಿತು. ಇದಕ್ಕೂ ಮೊದಲು ಸಮಾಜಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೂ ಆಹ್ವಾನ ನೀಡಲಾಯಿತು. ಇದೇ ವೇಳೆ ಯುವ ಸಂಭ್ರಮದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಜಿಪಂ ಸಿಇಓ ಎಸ್.ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು, ಚಾಮುಂಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.