ಬೆಂಗಳೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ-2025ರ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾಗಿರುವ ಲೇಖಕಿ ಬಾನು ಮುಷ್ಕಾಕ್ ಅವರಿಗೆ ಆಹ್ವಾನ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ.
ಗುರುವಾರ ನ್ಯಾಯಾಲಯದ ಕಲಾಪ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ವಿಭು ಭಕ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾಗಿ, ಅರ್ಜಿ ತುರ್ತು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಕೋರಿದರು.
ಆಗ, ಅರ್ಜಿ ಸಲ್ಲಿಸಿದ್ದ ಯಾವಾಗ ಎಂದು ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು. ನಿನ್ನೆಯಷ್ಟೇ (ಬುಧವಾರ) ಅರ್ಜಿ ಸಲ್ಲಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಸೆ.22ರಂದು ದಸರಾ ಉದ್ಘಾಟನೆ ಇದೆ. ಆದ್ದರಿಂದ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ನಿಗದಿಪಡಿಸಬೇಕು ಎಂದು ಮನವಿ ಮಾಡಿದ್ದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ನಿಗದಿಪಡಿಸಬೇಕಾದ ಅಗತ್ಯವಿಲ್ಲ ಸಾಮಾನ್ಯದಂತೆ ಅರ್ಜಿ ಸಲ್ಲಿಸಿದ ನಾಲ್ಕು ದಿನಗಳಲ್ಲಿ ವಿಚಾರಣೆಗೆ ನಿಗದಿಯಾಗಲಿದೆ ಎಂದು ಹೇಳಿ ಅರ್ಜಿದಾರರ ಪರ ವಕೀಲರ ಮನವಿಯನ್ನು ತಿರಸ್ಕರಿಸಿತು.
ಬಾನು ಮುಸ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ಕ್ರಮ ಪ್ರಶ್ನಿಸಿ ಬೆಂಗಳೂರಿನ ಎಚ್.ಎಸ್.ಗೌರವ್, ಉದ್ಯಮಿ ಟಿ.ಗಿರೀಶ್ ಕುಮಾರ್ ಹಾಗೂ ಅಭಿನವ ಭಾರತ್ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್.ಸೌಮ್ಯ ಅವರು ಪ್ರತ್ಯೇಕವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಇದೇ ವಿಚಾರವಾಗಿ ಈಗಾಗಲೇ ಮಾಜಿ ಸಂಸದ ಪ್ರತಾಪಸಿಂಹ ಸಹ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.