ಬೆಂಗಳೂರು : ಆರ್.ವಿ ರಸ್ತೆ(ರಾಗಿಗುಡ್ಡ) ಮೆಟ್ರೋ ಸ್ಟೇಷನ್ ನಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯನ್ನು ಸಂಪರ್ಕಿಸುವ ಆರ್.ವಿ ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಹಸಿರು ನಿಶಾನೆ ತೋರಿದ್ದಾರೆ. ನಿರಂತರ 8 ವರ್ಷಗಳ ಸುದೀರ್ಘ ವಿಳಂಬದ ನಂತರ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕಿಂದು ಚಾಲನೆ ದೊರಕಿದೆ.
ಆರ್.ವಿ.ರಸ್ತೆಯ (ರಾಗಿಗುಡ್ಡ) ಮೆಟ್ರೋ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಮೋದಿ ಪ್ರಯಾಣಿಸಿದ್ದಾರೆ. ಮೆಟ್ರೋ ಪ್ರಯಾಣಿಕರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಮೋದಿ ಕೆಲಕಾಲ ಸಂವಾದ ನಡೆಸಿದರು.
ಪ್ರಧಾನಿ ಮೋದಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲ ಥಾವರ್ ಚಾಂದ್ ಗೆಲ್ಹೋಟ್, ಕೇಂದ್ರ ರಾಜ್ಯ ಖಾತೆ ಸಚಿವ ಸೋಮಣ್ಣ, ಶೋಭಾ ಕರಂದ್ಲಾಜೆ, ಸಂಸದ ಡಾ. ಸಿ.ಎನ್ ಮಂಜುನಾಥ್ ಸೇರಿ ಪ್ರಮುಖರು ಸಾಥ್ ನೀಡಿದರು.



















