ನವ ದೆಹಲಿ : ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 13ಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೋದಿ ಮೊದಲು ಮಿಜೋರಾಂಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಬೈರಾಬಿ-ಸೈರಾಂಗ್ ರೈಲ್ವೆ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.
ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ದೊರಕಿದೆ ಎಂದು ಮಿಜೋರಾಂ ಸರ್ಕಾರ ಮೂಲದ ಹಲವು ಅಧಿಕಾರಿಗಳು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಐಜ್ವಾಲ್‌ನಿಂದ ವಿಮಾನದ ಮೂಲಕ ಪ್ರಧಾನಿ ಮಣಿಪುರಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲಿ ಕೆಲ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸುವ ನಿರೀಕ್ಷೆ ಇದೆ.
ಈಶಾನ್ಯ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ 28 ತಿಂಗಳ ಬಳಿಕ ಮೊದಲ ಬಾರಿಗೆ ಪ್ರಧಾನಿ ಭೇಟಿ ನೀಡುವ ಸಾಧ್ಯತೆಯಿದೆ.
ಹಾಗಿದ್ದರೂ ಮಣಿಪುರಕ್ಕೆ ಮೋದಿ ಭೇಟಿಯು ಇನ್ನಷ್ಟೇ ಅಧಿಕೃತಗೊಳ್ಳಬೇಕಿದೆ. ಇದನ್ನು ಇಂಫಾಲದ ಅಧಿಕಾರಿಗಳು ಸಹ ದೃಢೀಕರಿಸಲಿಲ್ಲ.
ಈ ನಡುವೆ ಪ್ರಧಾನಿ ಭೇಟಿಯ ಸಿದ್ಧತೆಗಳನ್ನು ಪರಿಶೀಲಿಸಲು ಮಿಜೋರಾಂನ ಮುಖ್ಯ ಕಾರ್ಯದರ್ಶಿ ಖಿಲ್ಲಿ ರಾಮ್ ಮೀನಾ, ಸೋಮವಾರ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಅತ್ತ ಮೋದಿ ಭೇಟಿ ಸಾಧ್ಯತೆಯ ಹಿನ್ನೆಲೆಯಲ್ಲಿ ಮಣಿಪುರದಲ್ಲೂ ಭದ್ರತೆ ಬಿಗಿಗೊಳಿಸಲಾಗಿದೆ.



















