ಬೆಂಗಳೂರು : 2028ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಬಿಜೆಪಿ ಸಿದ್ಧತೆ ಆರಂಭಿಸಿದೆ. ಇದರ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಇಂದು ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಭಾನುವಾರ ರಾಜ್ಯ ಬಿಜೆಪಿ ನಾಯಕರೊಂದಿಗೆ ಸಂಘಟನಾ ಸಭೆ ನಡೆಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಮೊದಲ ಬಾರಿ ನಿತಿನ್ ನಬಿನ್ ಅವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿದ ಅವರಿಗೆ ರಾಜ್ಯ ಬಿಜೆಪಿ ನಾಯಕರು ಭರ್ಜರಿ ಸ್ವಾಗತ ಕೋರಿದ್ದಾರೆ. ನಂತರ ಬಿಜೆಪಿ ಕಚೇರಿಯಲ್ಲಿ ಸಂಘಟನಾ ಸಭೆಯಲ್ಲಿ ಅವರು ಭಾಗವಹಿಸಿದರು.
ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಮತ್ತು ಸಾಧನೆಗಳನ್ನು ಹಳ್ಳಿ ಹಳ್ಳಿಗೂ ತಲುಪಿಸಬೇಕು. ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳು, ಹಗರಣಗಳು ಮತ್ತು ಜನವಿರೋಧಿ ನೀತಿಗಳನ್ನು ಜನರ ಮುಂದೆ ಬಹಿರಂಗಪಡಿಸಿ ಬೀದಿಗಿಳಿದು ಹೋರಾಟ ಮಾಡಬೇಕು ಎಂದು ನಿತಿನ್ ನಬಿನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಮುಂದಿನ ಚುನಾವಣೆಗಳ ದೃಷ್ಟಿಯಿಂದ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಅವರು ನೀಲನಕ್ಷೆ ಸಿದ್ಧಪಡಿಸಲಾಗಿದೆ.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗ್ರವಾಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಸಹ-ಉಸ್ತುವಾರಿ ಸುಧಾಕರ್ ರೆಡ್ಡಿ, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯ ಸಮಿತಿ ಸದಸ್ಯರು, ಮೋರ್ಚಾಗಳ ರಾಜ್ಯ ಅಧ್ಯಕ್ಷರು, ರಾಜ್ಯ ಮಾಧ್ಯಮ ತಂಡ, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ವಿಭಾಗ ಪ್ರಭಾರಿಗಳು, ಸಹ ಪ್ರಭಾರಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯ ಪ್ರಶಿಕ್ಷಣ ತಂಡದ ಎಲ್ಲ ಸದಸ್ಯರು ಭಾಗವಹಿಸಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಸ್ವಾಗತಿಸಿ ಪರಿಚಯ ಮಾಡಿದರು.


















