ಬೆಂಗಳೂರು: ರಾಜ್ಯದ ಪ್ರಥಮ ನೈಸರ್ಗಿಕ ಅನಿಲ ಆಧಾರಿತ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಲೋಕಾರ್ಪಣೆ ಮಾಡಿದ್ದಾರೆ.
370.05 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಈ ಸ್ಥಾವರವನ್ನು ಸ್ಥಾಪಿಸಲಾಗಿದೆ. ವಿದ್ಯುತ್ ಸ್ಥಾವರ ಬೆಂಗಳೂರಿನ ನಾಗರಿಕರಿಗೆ ಒಂದು ವಿಶೇಷ ಕೊಡುಗೆಯಾಗಿದೆ. ಸಮರ್ಪಕ ವಿದ್ಯುತ್ ಪೂರೈಕೆಗೆ ಸಹಕಾರಿಯಾಗಿದೆ. 370 ಮೆ.ವ್ಯಾ. ಸಾಮರ್ಥ್ಯದ ‘ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಸ್ಥಾವರ (ಕಂಬೈನ್ಡ್ ಸೈಕಲ್ ಪವರ್ ಪ್ಲಾಂಟ್)ಅನ್ನು ಸುಮಾರು 2,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಕರ್ನಾಟಕದಲ್ಲೇ ಮೊದಲ ವಿದ್ಯುತ್ ಉತ್ಪಾದನಾ ಸ್ಥಾವರವಾಗಿದೆ.
2016ರಲ್ಲಿ ಈ ಸ್ಥಾವರ ಸ್ಥಾಪನೆಗೆ ಮುಖ್ಯಮಂತ್ರಿಯಾಗಿ ನಾನೇ ಅಡಿಗಲ್ಲು ಹಾಕಿದ್ದೆ. ಆಗ ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದರು. ಕೆ.ಜೆ.ಜಾರ್ಜ್ ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದರು. ಎಂಟು ವರ್ಷಗಳ ಬಳಿಕ ಮುಖ್ಯಮಂತ್ರಿಯಾಗಿ ಸ್ಥಾವರ ಲೋಕಾರ್ಪಣೆ ಮಾಡಿದ್ದೇನೆ ಎಂದು ಹೇಳಿದ್ದಾರೆ.
ವಿದ್ಯುತ್ ನಲ್ಲಿ ಸ್ವಾವಲಂಬನೆ ಸಾಧ್ಯವಾಗದಿದ್ದರೆ ಆರ್ಥಿಕ ಪ್ರಗತಿ ಸಾಧ್ಯವಿಲ್ಲ. ವಾಣಿಜ್ಯ, ಕೃಷಿ, ಗೃಹ ಬಳಕೆಗೆ ವಿದ್ಯುತ್ ಅನಿವಾರ್ಯವಾಗಿದೆ. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸದಿದ್ದಲ್ಲಿ ಜಿಡಿಪಿ ಬೆಳವಣಿಗೆಯೂ ಆಗುವುದಿಲ್ಲ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಗುಣಮಟ್ಟದ ವಿದ್ಯುತ್ ಪೂರೈಕೆ ಜೊತೆಗೆ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.
ಗೋದ್ನಾದಲ್ಲಿ 1600 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಸ್ಥಾವರ, ಶರಾವತಿಯಲ್ಲಿ 2,000 ಮೆಗಾವ್ಯಾಟ್, ವಾರಾಹಿಯಲ್ಲಿ 1500 ಮೆಗಾವ್ಯಾಟ್ ಪಂಪ್ಡ್ ಸ್ಟೋರೇಜ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದರ ಜೊತೆಗೆ ಸೌರ ಮತ್ತು ಪವನ ವಿದ್ಯುತ್ ಉತ್ಪಾದನೆಗೂ ಆದ್ಯತೆ ನೀಡಲಾಗುವುದು ಎಂದು ಕೂಡ ಹೇಳಿದ್ದಾರೆ.