ಬೆಂಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಕತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದೆ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಿದ್ದಾರೆ.
ನಾಳೆಯೇ ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕಕ್ಕೆ ಸಿಗದೆ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ ಎಂದಿದ್ದಾರೆ.
ಬಳ್ಳಾರಿಯ 32 ಮಂದಿ ದುಬೈನಲ್ಲಿ ಸಿಲುಕಿರುವ ಬಗ್ಗೆ ಮಾಜಿ ಸಚಿವರಾದ ನಾಗೇಂದ್ರ ಅವರು ನನಗೆ ಮಾಹಿತಿ ನೀಡಿದ್ದು, ಅವರ ಸುರಕ್ಷತೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.
ಇದನ್ನೂ ಓದಿ : ಮಧ್ಯಪ್ರಾಚ್ಯದಲ್ಲಿ ಯುದ್ಧ | ನಿನ್ನೆ 410 ವಿಮಾನ ರದ್ದು, ಇಂದು 444 ಹಾರಾಟ ಸ್ಥಗಿತ



















