ನವದೆಹಲಿ : ನೀಟ್ ಪರೀಕ್ಷೆಗಳ ಆಯೋಜನೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ವಿರುದ್ಧ ದೇಶಾದ್ಯಂತ ಯುವಜನರ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ, ಕೇಂದ್ರ ಸರ್ಕಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯ 47 ಅಧಿಕಾರಿಗಳನ್ನು ವಜಾಗೊಳಿಸಿದೆ. ಶುಕ್ರವಾರ ಈ ಕ್ರಮ ಕೈಗೊಳ್ಳಲಾಗಿದ್ದು, ವಜಾಗೊಂಡ ಅಧಿಕಾರಿಗಳ ಹುದ್ದೆ ಅಥವಾ ಹಂತದ ಬಗ್ಗೆ NTA ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ.
ವಜಾಗೊಂಡ ಅಧಿಕಾರಿಗಳ ವಿರುದ್ಧ ಕಾನೂನು ಮತ್ತು ಕ್ರಿಮಿನಲ್ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಈ ಮೂಲಕ ಅಕ್ರಮಗಳಿಗೆ ಯಾವುದೇ ರೀತಿಯಲ್ಲೂ ಅವಕಾಶ ನೀಡುವುದಿಲ್ಲ ಎಂಬ ಬಲವಾದ ಸಂದೇಶ ರವಾನಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರದ ಈ ಕ್ರಮಕ್ಕೆ ಪ್ರತಿಕ್ರಿಯಿಸಿರುವ ಕಾಕ್‌ರೋಚ್ ಜನತಾ ಪಾರ್ಟಿ ವಕ್ತಾರರು, “ಇದು ಮೇಲಿನಿಂದಲೇ ಆರಂಭವಾಗಿದೆ” ಎಂದು ಆರೋಪಿಸಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬ ತಮ್ಮ ಬೇಡಿಕೆಯನ್ನು ಸಂಘಟನೆ ಮತ್ತೊಮ್ಮೆ ಪುನರುಚ್ಚರಿಸಿದೆ.
ಇದೇ ವೇಳೆ, 2024ರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನ್ಯಾಯದ ವಿಧಾನಗಳನ್ನು ತಡೆಯುವ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಶುಕ್ರವಾರ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧದ ಕಾಯ್ದೆಯಲ್ಲಿ ಇನ್ನಷ್ಟು ಕಠಿಣ ಶಿಕ್ಷೆ ಮತ್ತು ಸಮಯಮಿತಿಯೊಳಗೆ ವಿಚಾರಣೆ ಪೂರ್ಣಗೊಳಿಸುವ ವ್ಯವಸ್ಥೆ ಸೇರಿಸುವ ಪ್ರಸ್ತಾವನೆ ಇದಾಗಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ ಯುವಜನತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಕ್‌ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಇದೇ ವಿಚಾರವಾಗಿ ಬುಧವಾರ ಕೇಂದ್ರ ಸರ್ಕಾರ ಸಂಸತ್ತಿಗೆ ನೀಡಿದ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿರುವ 39 ಶಾಶ್ವತ ಹುದ್ದೆಗಳ ಪೈಕಿ 15 ಹುದ್ದೆಗಳು ಖಾಲಿ ಇವೆ. 2026ರಲ್ಲಿ ಇದುವರೆಗೆ NTA 12 ಪರೀಕ್ಷೆಗಳನ್ನು ನಡೆಸಿದ್ದು, ಒಟ್ಟು 65 ಲಕ್ಷ ಅಭ್ಯರ್ಥಿಗಳು ಈ ಪರೀಕ್ಷೆಗಳಿಗೆ ನೋಂದಣಿ ಮಾಡಿಕೊಂಡಿದ್ದಾರೆ. 2023-24ನೇ ಹಣಕಾಸು ವರ್ಷದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ₹1,116 ಕೋಟಿ ಆದಾಯ ಗಳಿಸಿದ್ದು, ₹1,040 ಕೋಟಿ ವೆಚ್ಚ ಮಾಡಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ರಾಜ್ಯಸಭೆಗೆ ಮಾಹಿತಿ ನೀಡಿದೆ.
ಇದನ್ನೂ ಓದಿ : ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!


















