ನವದೆಹಲಿ : ದೇಶಾದ್ಯಂತ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ನೀಟ್ (NEET UG) ಪರೀಕ್ಷೆಯಲ್ಲಿ ನಿರಂತರವಾಗಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಪದ್ಧತಿಯಲ್ಲಿ ಕೇಂದ್ರ ಸರ್ಕಾರ ಮಹತ್ತರ ಬದಲಾವಣೆಯನ್ನು ಘೋಷಿಸಿದೆ. ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ‘ಕಂಪ್ಯೂಟರ್ ಆಧಾರಿತ ಪರೀಕ್ಷೆ’ (CBT) ಮಾದರಿಯಲ್ಲಿ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದೆ.
ಪೇಪರ್ ಲೀಕ್ ದೃಢ: ಮರುಪರೀಕ್ಷೆಗೆ ದಿನಾಂಕ ನಿಗದಿ
ಇಂದು (ಶುಕ್ರವಾರ) ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ತನಿಖೆಯಿಂದ ದೃಢಪಟ್ಟ ಹಿನ್ನೆಲೆಯಲ್ಲಿ, ಮೇ 12ರಂದು ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಇದೀಗ ಜೂನ್ 21ರಂದು ಮರುಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ದಿನಾಂಕ ನಿಗದಿಪಡಿಸಿದೆ. ಈ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳು ಜೂನ್ 14ರಿಂದ ಲಭ್ಯವಾಗಲಿವೆ ಎಂದು ಮಾಹಿತಿ ನೀಡಿದ್ದಾರೆ.
ಅಕ್ರಮ ಎಸಗುವವರ ವಿರುದ್ಧ ಶೂನ್ಯ ಸಹಿಷ್ಣುತೆ
“ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಅಕ್ರಮ ಎಸಗುವ ಸಮಾಜವಿರೋಧಿ ಶಕ್ತಿಗಳ ವಿರುದ್ಧ ನಮ್ಮ ಸರ್ಕಾರ ಶೂನ್ಯ ಸಹಿಷ್ಣುತೆ ಹೊಂದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಎಚ್ಚರಿಸಿದ್ದಾರೆ. ಪರೀಕ್ಷಾ ಪದ್ಧತಿಯಲ್ಲಿನ ಲೋಪದೋಷಗಳನ್ನು ಪತ್ತೆಹಚ್ಚಲು ಮತ್ತು ಸರಣಿ ಅಕ್ರಮಗಳ ಮೂಲವನ್ನು ತಲುಪಲು ಕೇಂದ್ರೀಯ ತನಿಖಾ ದಳಕ್ಕೆ (CBI) ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಹಿತರಕ್ಷಣೆಗೆ ಕ್ರಮ
ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಸಂಕಷ್ಟಕ್ಕೀಡಾಗಿರುವ ವಿದ್ಯಾರ್ಥಿಗಳಿಗೆ ಸರ್ಕಾರವು ಕೆಲವು ರಿಯಾಯಿತಿಗಳನ್ನು ಘೋಷಿಸಿದೆ. ಮರುಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು ಮರುಪಾವತಿಸಲಾಗುವುದು ಮತ್ತು ಉಚಿತವಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಅಲ್ಲದೆ, ಪರೀಕ್ಷೆಗೆ ಒಂದು ವಾರ ಮುಂಚಿತವಾಗಿ ವಿದ್ಯಾರ್ಥಿಗಳು ತಮಗೆ ಇಷ್ಟವಾದ ಪರೀಕ್ಷಾ ಕೇಂದ್ರದ ನಗರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು. ಹವಾಮಾನ ವೈಪರೀತ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸುತ್ತಿದೆ.
ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳ ಹೊರತಾಗಿಯೂ ಪರೀಕ್ಷಾ ವ್ಯವಸ್ಥೆಯಲ್ಲಿ ಬಿರುಕು ಮೂಡಿರುವುದನ್ನು ಒಪ್ಪಿಕೊಂಡ ಸಚಿವರು, ಎನ್‌ಟಿಎ (NTA) ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಿ, ‘ಶೂನ್ಯ ದೋಷ’ದೊಂದಿಗೆ ಪರೀಕ್ಷೆ ನಡೆಸಲು ಅಗತ್ಯವಿರುವ ಎಲ್ಲಾ ಸುಧಾರಣೆಗಳನ್ನು ತರುವುದಾಗಿ ಭರವಸೆ ನೀಡಿದ್ದಾರೆ. “ಯಾವುದೇ ಪರೀಕ್ಷಾ ಮಾಫಿಯಾ ಕಷ್ಟಪಟ್ಟು ಓದುವ ವಿದ್ಯಾರ್ಥಿಗಳ ಸೀಟುಗಳನ್ನು ಕಸಿದುಕೊಳ್ಳಲು ನಾವು ಬಿಡುವುದಿಲ್ಲ” ಎಂದು ಸಚಿವರು ಹೇಳಿದ್ದಾರೆ.
ಇದನ್ನೂ ಓದಿ : MBA ಮುಗಿಸಿದವರಿಗೆ ಗುಡ್ ನ್ಯೂಸ್ : ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 2 ಹುದ್ದೆಗಳ ನೇಮಕಾತಿ!


















