ಹುಬ್ಬಳ್ಳಿ : ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ನ್ಯಾಯಪೀಠ ವಜಾಗೊಳಿಸಿ ಆದೇಶಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಹ ತಿರಸ್ಕೃತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಕೂಡ ವಜಾಗೊಳಿಸಿ ಆದೇಶ ಹೊರಡಿಸಿದೆ.
2024ರ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾಳನ್ನು ಫಯಾಜ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಈ ಸಂಬಂಧ ಜೈಲಿನಲ್ಲಿರುವ ಫಯಾಜ್, ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಈ ಅರ್ಜಿ ವಿಚಾರಣೆ ನಡೆಸಿದ್ದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಕೋರ್ಟ್, ಜಾಮೀನು ನೀಡಲು ನಿರಾಕರಿಸಿತ್ತು. ಈ ಸಂಬಂಧ ಇದನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಮೊರೆ ಹೋಗಿದ್ದ. ಆದ್ರೆ, ಇಂದು ಧಾರವಾಡ ಕೋರ್ಟ್ ಸಹ ಫಯಾಜ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಏಪ್ರಿಲ್ 18, 2024ರಂದು, ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ 24 ವರ್ಷದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆ ನಡೆದಿತ್ತು. ಫಯಾಜ್ ಎನ್ನುವ ಯುವಕ 10 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಹಿರಿದು ನೇಹಾಳನ್ನ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ. ಬಳಿಕ ಪೊಲಿಸರು ಕಾರ್ಯಚರಣೆ ನಡೆಸಿ ಆರೋಪಿ ಬೆಳಗಾವಿ ಜಿಲ್ಲೆಯ ಫಯಾಜ್ ಕೊಂಡುನಾಯ್ಕ್ (24) ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು ಪ್ರಕರಣವು ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ಪ್ರತಿಭಟನೆ ನಡೆಸಿದ್ದರು.