ಉಡುಪಿ : ಬೈಂದೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ಪ್ರತಿಭಾ ಪ್ರದರ್ಶನ ಹಾಗೂ 2025-26ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭ ಸಂಭ್ರಮದಿಂದ ನಡೆಯಿತು. ವಿದ್ಯಾರ್ಥಿಗಳ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬಿದ ಈ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಡೆಸಾಲ್ಟ್ ಸಿಸ್ಟಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ CFO ವಿಶ್ವನಾಥ್ ಶೇಟ್ ನೂತನ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿ, ಕಾಲೇಜಿನ ಅಭಿವೃದ್ಧಿಗೆ ಈ ಸಭಾಂಗಣ ಮಹತ್ವದ ಸಹಕಾರಿಯಾಗಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಇನ್ನಷ್ಟು ಉತ್ತೇಜನ ಸಿಗಲಿದೆ ಎಂದು ಹೇಳಿದರು.
ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ಬಾಬು ಶೆಟ್ಟಿ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಮತ್ತು ಸಾಂಸ್ಕೃತಿಕ ವೇದಿಕೆಗಳು ಅತ್ಯಂತ ಅಗತ್ಯವಾಗಿವೆ ಎಂದರು. ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳಲು ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗುತ್ತವೆ ಎಂದು ಹೇಳಿದ ಅವರು, ನೂತನ ಸಭಾಂಗಣವು ಭವಿಷ್ಯದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರಮುಖ ಕೇಂದ್ರವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಸಿಎಸ್ಆರ್ ಬೆಂಬಲದೊಂದಿಗೆ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳ ಅಭಿವೃದ್ಧಿಗೆ ಅನೇಕ ಸಂಸ್ಥೆಗಳು ಕೈಜೋಡಿಸುತ್ತಿರುವುದು ಶ್ಲಾಘನೀಯ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಮತ್ತು ಶಿಕ್ಷಣ ಸೌಲಭ್ಯ ಒದಗಿಸಲು ಸಮಾಜದ ಸಹಭಾಗಿತ್ವ ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು.
ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಅತ್ಯುತ್ತಮ ಉಪನ್ಯಾಸಕರ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡುತ್ತಿದ್ದಾರೆ ಎಂದು ಹೇಳಿದರು. ಕಾಲೇಜು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಬೆಳವಣಿಗೆಯ ಕೇಂದ್ರವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿಗೆ ಸಹಕರಿಸಿದ ದಾನಿಗಳನ್ನು ಹಾಗೂ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದವು.
ಈ ಸಂದರ್ಭದಲ್ಲಿ ಜಗನ್ನಾಥ ಶೆಟ್ಟಿ, ಪ್ರಥಮ ದರ್ಜೆ ಗುತ್ತಿಗೆದಾರರು ಬೈಂದೂರು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಗಿರೀಶ್ ಬೈಂದೂರು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಶ್ರೀ ಕ್ಷೇತ್ರ ಕೊಲ್ಲೂರು ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ದಯಾನಂದ ಹೋಬಳಿದಾರ್, ಸರ್ಕಾರಿ ಪದವಿ ಪೂರ್ವ ಕಾಲೇಜು ಬೈಂದೂರಿನ ಪ್ರಾಂಶುಪಾಲ ವೆಂಕಟರಮಣ ಬಿ, ಪ್ರಕಾಶ್ಚಂದ್ರ ಶೆಟ್ಟಿ ಕಾಲ್ತೋಡು, ವಸಂತ್ ಪೂಜಾರಿ ಬೈಂದೂರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ವಿದ್ಯಾರ್ಥಿ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಹಳೆವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಪಾಲಕರು ಉಪಸ್ಥಿತರಿದ್ದರು.
ಶಿಕ್ಷಕರಾದ ಮಣಿಕಂಠ ಸನ್ಮಾನ ಪತ್ರ ವಾಚಿಸಿದ್ದು, ಉಪನ್ಯಾಸಕರಾದ ಶ್ರೀಮತಿ ಶರ್ಮಿಳಾ ಹಾಗೂ ಶ್ರೀಮತಿ ಸುಚಿತ್ರಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಮಮತಾ ಸ್ವಾಗತಿಸಿದರು. ಉಪನ್ಯಾಸಕರಾದ ಡಾ. ಶಿವಕುಮಾರ್ ಪಿ.ವಿ ವಂದಿಸಿದರು.
ಇದನ್ನೂ ಓದಿ : 98 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿ


















