ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ನಲ್ಲಿ ಭಾರತೀಯ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.
8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ 171 ಎಸೆತಗಳಲ್ಲಿ ಚೊಚ್ಚಲ ಶತಕ ಸಿಡಿಸಿದ್ದಾರೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲ ಇನಿಂಗ್ಸ್ನಲ್ಲಿ 474 ರನ್ ಗಳಿಸಿದೆ. ಉತ್ತರವಾಗಿ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿರಲಿಲ್ಲ. ರೋಹಿತ್ ಶರ್ಮಾ ಕೇವಲ 3 ರನ್ ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 24 ರನ್ ಗಳಿಸಿ ಔಟ್ ಆದರು.
ವಿರಾಟ್ ಕೊಹ್ಲಿ ಹಾಗೂ ಯಶಸ್ವಿ ಜೈಸ್ವಾಲ್ ಶತಕದ ಜೊತೆಯಾಟ ನೀಡಿದರು. ಆದರೆ ತಂಡದ ಮೊತ್ತ 153 ರನ್ ಆಗಿದ್ದ ಸಂದರ್ಭದಲ್ಲಿ ಯಶಸ್ವಿ ಜೈಸ್ವಾಲ್ (82) ರನೌಟ್ ಆಗಿ ಹೊರ ನಡೆದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (36) ಸಹ ವಿಕೆಟ್ ಒಪ್ಪಿಸಿದರು. ಆಕಾಶ್ ದೀಪ್ (0) ಶೂನ್ಯಕ್ಕೆ ಔಟಾದರೆ, ರಿಷಭ್ ಪಂತ್ 28 ರನ್ ಗಳಿಸಿದರು.
ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ಕುಮಾರ್ ರೆಡ್ಡಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿ ಶತಕ ಸಿಡಿಸಿ, ಭಾರತ ತಂಡಕ್ಕೆ ಆಸರೆಯಾಗಿದ್ದಾರೆ. ಈ ಮೂಲಕ ತಂಡದ ಮೊತ್ತವನ್ನು 300ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.