ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ತಿಂಗಳ 28ರಿಂದ ಆರಂಭವಾಗಲಿರುವ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಆಯೋಜಿಸಲು ಯಾವುದೇ ಅಡಚಣೆ ಇಲ್ಲವೆಂದು ಪರಿಶೀಲನಾ ಸಮಿತಿ ಸೂಚನೆ ನೀಡುವ ಸಾಧ್ಯತೆ ಇದೆ. ಇಂದು ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಮಿತಿ ಸದಸ್ಯರು ಸಿದ್ಧತೆಗಳನ್ನು ಪರಿಶೀಲಿಸಿದ್ದು, ಅಂತಿಮ ವರದಿಯನ್ನು ಇಂದು ಸಂಜೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಿದ್ದಾರೆ.
ಕಳೆದ ವರ್ಷ ಐಪಿಎಲ್ ಸಂದರ್ಭದಲ್ಲಿ ಆರ್‌ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ದುರಂತದಲ್ಲಿ ಸುಮಾರು 11 ಮಂದಿ ಅಭಿಮಾನಿಗಳು ಮೃತಪಟ್ಟ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುರಕ್ಷತೆ ಕುರಿತು ರಾಜ್ಯ ಸರ್ಕಾರ ವಿಶೇಷ ಗಮನ ಹರಿಸಿತ್ತು. ಈ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ. ಕುನ್ನಾ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ, ಪಂದ್ಯ ಆಯೋಜನೆಗೆ ಸಂಬಂಧಿಸಿದ ಸುರಕ್ಷತಾ ಮಾನದಂಡಗಳು ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ಸೂಚಿಸಲಾಗಿತ್ತು.
ಸಮಿತಿ ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಮಗ್ರ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಿದೆ. ಆರಂಭಿಕ ವರದಿಯಲ್ಲಿ ಜನಸಂದಣಿ ನಿಯಂತ್ರಣ, ತುರ್ತು ಪರಿಸ್ಥಿತಿಯಲ್ಲಿ ಹೊರಬರುವ ದಾರಿಗಳ ಕೊರತೆ ಸೇರಿದಂತೆ ಹಲವು ನ್ಯೂನತೆಗಳನ್ನು ಗುರುತಿಸಲಾಗಿತ್ತು. ಕಳೆದ ಅನಾಹುತದ ಬಳಿಕ ಇಂದಿನವರೆಗೆ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯ ಆಯೋಜನೆ ಆಗಿರಲಿಲ್ಲ ಎಂಬುದೂ ಗಮನಾರ್ಹವಾಗಿದೆ.
ಸಮಿತಿಯ ಸೂಚನೆಯಂತೆ ಕ್ರೀಡಾಂಗಣದ ಪ್ರವೇಶ ದ್ವಾರಗಳನ್ನು ಕನಿಷ್ಠ 21 ಅಡಿ ಅಗಲಕ್ಕೆ ವಿಸ್ತರಿಸುವುದು, ಸ್ಟ್ಯಾಂಡ್ ಮೆಟ್ಟಿಲುಗಳನ್ನು ವಿಸ್ತರಿಸುವುದು, ಪಾರ್ಕಿಂಗ್ ವ್ಯವಸ್ಥೆಯನ್ನು ಸುಧಾರಿಸುವುದು ಹಾಗೂ ತಡೆಗೋಡೆ ಮರುನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಜೊತೆಗೆ ಅಂಬುಲೆನ್ಸ್ ಮತ್ತು ಅಗ್ನಿಶಾಮಕ ದಳದ ವಾಹನಗಳ ಸಂಚಾರಕ್ಕೆ ಸುಗಮ ವ್ಯವಸ್ಥೆ ಕಲ್ಪಿಸಲಾಗಿದೆ.
ಇಂದು ನಡೆದ ಪರಿಶೀಲನೆ ವೇಳೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಕ್ರೀಡಾಂಗಣದ ಸಿದ್ಧತೆಗಳನ್ನು ಪರಿಶೀಲಿಸಿದರು. ಸಮಿತಿ ಸೂಚಿಸಿದ್ದ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂದ್ಯ ದಿನಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಕ್ರೀಡಾಂಗಣ ಆವರಣದಲ್ಲೇ ಅಭಿಮಾನಿಗಳು ಸಾಲುಗಟ್ಟಿ ನಿಲ್ಲಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆ, ಶಾಶ್ವತವಾಗಿ ಮುಚ್ಚಿದ್ದ ಕೆಲವು ಗೇಟ್‌ಗಳನ್ನು ತೆರೆಯುವ ಮೂಲಕ ಜನರ ಓಡಾಟಕ್ಕೆ ಅನುಕೂಲ ಮಾಡಲಾಗಿದೆ.
ಈ ಎಲ್ಲಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಐಪಿಎಲ್ ಉದ್ಘಾಟನಾ ಪಂದ್ಯ ಸೇರಿದಂತೆ ಮುಂದಿನ ಪಂದ್ಯಗಳನ್ನು ಆಯೋಜಿಸಲು ಯಾವುದೇ ಅಭ್ಯಂತರವಿಲ್ಲ ಎಂಬುದಾಗಿ ಸಮಿತಿ ತನ್ನ ಅಂತಿಮ ವರದಿಯಲ್ಲಿ ಉಲ್ಲೇಖಿಸುವ ಸಾಧ್ಯತೆ ಇದೆ. ಅಂತಿಮ ವರದಿ ಇಂದು ಸಂಜೆ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ಜಿಬಿಎ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ



















