ಬೀದರ್: ಪಹಲ್ಗಾಮ್ ಪೈಶಾಚಿಕ ಕೃತ್ಯ ಖಂಡಿಸಿ, ರಸ್ತೆ ಮೇಲೆ ಪಾಕ್ ಧ್ವಜ ಅಂಟಿಸಿ ಪ್ರತಿಭಟಿಸಿದವರಿಗೆ ನೋಟಿಸ್ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಬೀದರ್ ನ ಮಾರ್ಕೆಟ್ ಪೊಲೀಸರು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಬಿರಾದಾರ್ ಗೆ ಮೇ 7ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಪಹಲ್ಗಾಮ್ ಕೃತ್ಯ ಖಂಡಿಸಿ ಏ. 26ರಂದು ಬೀದರ್‌ನ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪಾಕಿಸ್ತಾನ ಧ್ವಜದ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದ್ದರು. ಹೀಗಾಗಿ ಸಂತೋಷ್ ಬಿರಾದಾರ್ ಗೆ ನೋಟಿಸ್ ನೀಡಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 35(3)ರಡಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಆದರೆ, ಇದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ನೋಟಿಸ್ ಶೇರ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ. ದೇಶಭಕ್ತನಾಗಿ, ಶತ್ರು ರಾಷ್ಟ್ರದ ವಿರುದ್ಧ ಪ್ರತಿಭಟನೆ ಮಾಡಿದರೆ ತಪ್ಪೇನು? ಎಂದು ಪ್ರಶ್ನಿಸಿ ಆಕ್ರೋಶ ಹೊರ ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಟ್ಯಾಗ್ ಮಾಡಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.