ಬಿಹಾರ : ‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ‘ಓಟ್ ಅಧಿಕಾರ್ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್’ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಿಹಾರದ ಅರಾರಿಯಾದಲ್ಲಿ ವರದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಬಿಹಾರದ ವರೆಗೆ ಧ್ವನಿ ಎತ್ತಿರುವ ವಿಚಾರದ ಬಗ್ಗೆ ಇಡೀ ದೇಶವೇ ಚರ್ಚಿಸುತ್ತಿದೆ. ರಾಹುಲ್ ಗಾಂಧಿ ಅವರು ತಮಗಾಗಿ ಈ ಹೋರಾಟ ಮಾಡುತ್ತಿಲ್ಲ. ಸಂವಿಧಾನದತ್ತವಾಗಿ ದೇಶದ ಜನಸಾಮಾನ್ಯರಿಗೆ ಸಿಕ್ಕಿರುವ ಹಕ್ಕಿನ ರಕ್ಷಣೆಗೆ ಹೋರಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಏನಾಗಿದೆ ಎಂದು ನನಗೆ ತಿಳಿದಿದೆ. ಮತದಾರರು ತಮ್ಮ ಹಕ್ಕನ್ನು ಪಡೆಯಲು ಅವಕಾಶ ಮಾಡಿಕೊಟ್ಟಿರುವ ಸುಪ್ರೀಂ ಕೋರ್ಟ್ ಬಗ್ಗೆ ನನಗೆ ಹೆಮ್ಮೆ ಇದೆ. ಬಿಹಾರದ ಜನ ಬದಲಾವಣೆ ಬಯಸಿದ್ದಾರೆ. ಮಹಾಘಟಬಂಧನ ಬಯಸಿದ್ದಾರೆ. ಇಲ್ಲಿನ ಯುವಕರು ಬೀದಿಗಿಳಿದು ಬೆಂಬಲ ನೀಡುತ್ತಿದ್ದಾರೆ. ಯುವಕರು ಬಹುದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡುತ್ತಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ನಮ್ಮ ಮಹಾಘಟಬಂಧನ ನೀಡಿರುವ ಗ್ಯಾರಂಟಿ ಯೋಜನೆಗಳು ಜನರಿಗೆ ನೆರವಾಗಲಿದ್ದು, ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. ನಾವು ಅಧಿಕಾರಕ್ಕೆ ಬಂದ ಎಲ್ಲ ರಾಜ್ಯಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ. ಕಳೆದ ಬಾರಿ ಮಹಾಘಟಬಂಧನ ಕಡಿಮೆ ಅಂತರದಲ್ಲಿ ಸೋತಿತ್ತು. ಈ ಬಾರಿ ಗೆದ್ದೇ ಗೆಲ್ಲುವ ವಿಶ್ವಾಸ ನನಗಿದೆ. ಈ ಬಾರಿ ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟದ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.



















