ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಅವರ ಮೊಮ್ಮಗ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಸೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಆದೇಶ ನೀಡಿದೆ.
ರಾಹುಲ್ ಗಾಂಧಿ ಅವರು ಕಳೆದ ವರ್ಷ ಲಂಡನ್ ನಲ್ಲಿ ಭಾಷಣ ಮಾಡಿದ್ದರು. ಈ ವೇಳೆ ವಿ.ಡಿ. ಸಾವರ್ಕರ್ ಅವರು ತಮ್ಮ ಐದಾರು ಸ್ನೇಹಿತರೊಂದಿಗೆ ಸೇರಿಕೊಂಡು ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಖುಷಿಪಟ್ಟಿದ್ದಾಗಿ ಪುಸ್ತಕದಲ್ಲಿ ಬರೆದುಕೊಂಡಿದ್ದರು ಎಂದು ಹೇಳಿಕೆ ನೀಡಿದ್ದರು. ಆದರೆ, ಇದಕ್ಕೆ ಸಾವರ್ಕರ್ ಅವರ ಮೊಮ್ಮಗ ಕಿಡಿಕಾರಿದ್ದಾರೆ.
ಈ ಕುರಿತು ಎಲ್ಲಿಯೂ ಬರೆದುಕೊಂಡಿಲ್ಲ. ರಾಹುಲ್ ದುರುದ್ಧೇಶದಿಂದ ಈ ಹೇಳಿಕೆ ನೀಡಿದ್ದಾರೆ. ಅವರು ಹಿಂದುತ್ವ ಸಿದ್ಧಾಂತದ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಸಾತ್ಯಕಿ ಸಾವರ್ಕರ್ ಅವರು ಕಳೆದ ವರ್ಷ ರಾಹುಲ್ ಗಾಂಧಿ ವಿರುದ್ಧ ಪುಣೆ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳಿಗೆ ಸಂಬಂಧಿಸಿದ ವಿಶೇಷ ನ್ಯಾಯಾಲಯವು ಅ.23ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ, ಸಮನ್ಸ್ ತಲುಪಿಲ್ಲ ಎಂದು ಹೇಳಿ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈಗ ಮತ್ತೆ ಮನವಿ ಮಾಡುವುದಾಗಿ ಸಾವರ್ಕರ್ ಪರ ವಕೀಲರು ಹೇಳಿದ್ದಾರೆ.