ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆಗೆ ತೆರಳಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಫುಟ್‌ಪಾತ್ ವ್ಯಾಪಾರಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಶಿವಾಜಿನಗರ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಫುಟ್‌ಪಾತ್ ತೆರವು ಮಾಡಲು ತೆರಳಿದ್ದ ವೇಳೆ ಕೇಂದ್ರ ನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಾಧವ ರಾವ್ ಹಾಗೂ ಸಿಬ್ಬಂದಿ ಮೇಲೆ ಸ್ಥಳೀಯ ಫುಟ್‌ಪಾತ್ ವ್ಯಾಪಾರಿಗಳು ಹಲ್ಲೆ ನಡೆಸಿದ್ದಾರೆ.
ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ ಸ್ಥಳೀಯ ವ್ಯಾಪಾರಿಗಳು ಅಧಿಕಾರಿಗಳೊಂದಿಗೆ ಗಲಾಟೆ ನಡೆದಿದ್ದು, ಕಪಾಳಕ್ಕೆ ಹಾಗೂ ಕೈಗೆ ಸಿಕ್ಕ ವಸ್ತುಗಳಿಂದ ಮಾಧವ ರಾವ್ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಅಧಿಕಾರಿಗಳಿಗೆ ಗಾಯಗಳಾಗಿದ್ದು, ಈ ಸಂಬಂಧ ಹಲ್ಲೆ ನಡೆಸಿದ ವ್ಯಾಪಾರಿಗಳ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಿಸಲಾಗಿದೆ.
ಹಲ್ಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಆಗ್ರಹಿಸಿದ್ದಾರೆ. ಆರೋಪಿಗಳನ್ನು ತಕ್ಷಣ ಬಂಧಿಸದಿದ್ದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಯ ಎಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : 77 ಲಕ್ಷ ಲಂಚ ಕೇಸ್ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!


















