ಹುಬ್ಬಳ್ಳಿ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಣ್ಣೆ ಹಳ್ಳದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಲ್ಲದೇ, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಮೃತರ ನಿವಾಸಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಕುಂದಗೋಳ ತಾಲ್ಲೂಕು ಹಂಚಿನಾಳ ಗ್ರಾಮದ ಬಳಿಯ ಹಳ್ಳದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಕುಂದಗೋಳ ನಿವಾಸಿ 31 ವರ್ಷದ ಶಿವಯ್ಯ ವಟ್ನಾಲಮಠ ಸಾವನ್ನಪ್ಪಿದ್ದಾರೆ. ಶಿವಯ್ಯ ನಿವಾಸಕ್ಕೆ ಧಾರವಾಡ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಕುಂದಗೋಳ ಸರ್ಕಾರಿ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.