ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಸರ್ಕಾರಿ ವೈದ್ಯರು ನಾಳೆಯಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಇದರಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗ (ಒಪಿಡಿ) ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ವೈದ್ಯರು ಎರಡು ಹಂತಗಳಲ್ಲಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಮೊದಲ ಹಂತದಲ್ಲಿ ಮಾ. 11ರಿಂದ ಮಾರ್ಚ್ 15ರವರೆಗೆ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಡಿಸ್ಪೆನ್ಸರಿಗಳಲ್ಲಿ ವೈದ್ಯರು ಕಪ್ಪು ಪಟ್ಟಿಯನ್ನು ಧರಿಸಿ ಒಪಿಡಿ ಸೇವೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಿದ್ದಾರೆ. ಈ ಅವಧಿಯಲ್ಲಿ ಕೇವಲ ತುರ್ತು ಚಿಕಿತ್ಸಾ ಸೇವೆಗಳನ್ನು ಮಾತ್ರ ನೀಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಎರಡನೇ ಹಂತದಲ್ಲಿ ಮಾರ್ಚ್ 16ರಿಂದ ವೈದ್ಯರು ಅನಿರ್ದಿಷ್ಟಾವಧಿಗೆ ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಆಸ್ಪತ್ರೆ ಸೇವೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇದೆ.
ವೈದ್ಯರ ಪ್ರಮುಖ ಬೇಡಿಕೆಗಳು:
- ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಔಷಧಗಳ ಸರಬರಾಜು ಮಾಡಬೇಕು
- ವೃಂದ ಹಾಗೂ ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕು
- ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಬೇಕು
- ಕಳೆದ ಐದು ವರ್ಷಗಳಿಂದ ಬಾಕಿ ಉಳಿದಿರುವ ಮುಂಬಡ್ತಿಗಳನ್ನು ನೀಡಬೇಕು
- ಉನ್ನತ ವ್ಯಾಸಂಗ ಹಾಗೂ ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಬೇಕು
- ಕೇಂದ್ರ ಪುರಸ್ಕೃತ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸುಮಾರು 6 ಸಾವಿರ ನೌಕರರಿಗೆ ಪ್ರತೀ ತಿಂಗಳ ಮೊದಲ ವಾರದಲ್ಲೇ ವೇತನ ಹಾಗೂ ಭತ್ಯೆ ನೀಡಬೇಕು
- ಖಾಲಿ ಇರುವ ವೈದ್ಯರು ಹಾಗೂ ಅರೆವೈದ್ಯರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು
ವೈದ್ಯರ ಈ ನಿರ್ಧಾರದಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಸರ್ಕಾರ ಹಾಗೂ ವೈದ್ಯರ ಸಂಘಟನೆಗಳ ನಡುವಿನ ಮಾತುಕತೆಗಳಿಗೆ ಮಹತ್ವ ಸಿಕ್ಕಿದೆ.
ಇದನ್ನೂ ಓದಿ : ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ : ಹೊಸ ದಿನಾಂಕದ ಮಾಹಿತಿ ಇಲ್ಲಿದೆ



















